ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇರುವ ಶಿಕ್ಷಕರನ್ನು ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನೆವದಲ್ಲಿ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಆನಗಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಪೋಷಕರು ಶಾಲೆಗೆ ಬೀಗ ಹಾಕಿ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು.
ಶಾಲಾ ಮಕ್ಕಳು ತರಗತಿ ಬಹಿಷ್ಕರಿಸಿ ರಾಜ್ಯ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿ ಖಂಡಿಸಿ ತಮ್ಮ ಪೋಷಕರೊಂದಿಗೆ ಪ್ರತಿಭಟನೆ ನಡೆಸಿದರು. ಶಿಕ್ಷಕಿರನ್ನು ಹೆಚ್ಚುವರಿ ಶಿಕ್ಷಕರ ನೆವದಲ್ಲಿ ವರ್ಗಾವಣೆ ಮಾಡಿ, ಮಕ್ಕಳ ವಿದ್ಯಭ್ಯಾಸಕ್ಕೆ ತೊಂದರೆಯಾಗುತ್ತಿದ್ದು, ಇಲ್ಲಿರುವ ಶಿಕ್ಷಕರನ್ನು ಇಲ್ಲಿಯೇ ಉಳಿಸಿ ಮಕ್ಕಳ ವಿದ್ಯಭ್ಯಾಸಕ್ಕೆ ಅನುವು ಮಾಡಿಕೊಡಬೇಕೆಂದು ಪೋಷಕರು ಆಗ್ರಹಿಸಿದರು.
ಸರಕಾರಿ ಶಾಲೆ ಉಳಿಸಿಕೊಳ್ಳಬೇಕು ಎಂದು ಸರ್ಕಾರ ಹಲವಾರು ಯೋಜನೆ ರೂಪಿಸುತ್ತಿದೆ. ಆದರೆ ಹೆಚ್ಚುವರಿ ಶಿಕ್ಷಕರ ನೆವದಲ್ಲಿ ಶಿಕ್ಷಕರನ್ನು ವರ್ಗಾವಣೆ ಮಾಡಿ ಮಕ್ಕಳ ವಿದ್ಯಭ್ಯಾಸದ ಮೇಲೆ ಶಿಕ್ಷಣ ಇಲಾಖೆ ಚೆಲ್ಲಾಟವಾಡುತ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ. ವರ್ಗಾವಣೆ ಆದೇಶ ಹಿಂಪಡೆಯಬೇಕು ಇಲ್ಲವಾದಲ್ಲಿ ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವುದಿಲ್ಲವೆಂದು ಪ್ರತಿಭಟನಾಕಾರರು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು ಪಾಲ್ಗೊಂಡಿದ್ದರು.