ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಆಗಸ್ಟ್ 28 ಮತ್ತು 29 ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಉಡುಪಿ 5, ಕುಂದಾಪುರದ 3 ಮತ್ತು ಕಾರ್ಕಳ 2 ಸೇರಿದಂತೆ ಜಿಲ್ಲೆಯ ಒಟ್ಟು 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 3,624 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಪರೀಕ್ಷೆಯು ಅತ್ಯಂತ ಸುವ್ಯವಸ್ಥಿತವಾಗಿ ನಡೆಯಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಸಿಇಟಿ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೋವಿಡ್19 ಸನ್ನಿವೇಶದಲ್ಲಿ ಸಿಇಟಿ ಪರೀಕ್ಷೆ ನಡೆಯುತ್ತಿದ್ದು ,ಆರೋಗ್ಯ ಇಲಾಖೆ ಸೂಚಿಸಿರುವ ಎಲ್ಲಾ ಎಸ್.ಓ.ಪಿ ಅಂಶಗಳನ್ನು ಪಾಲಿಸಿ ಪರೀಕ್ಷೆಯನ್ನು ಆಯೋಜಿಸಬೇಕು , ಕೆಮ್ಮು ಶೀತ,ಜ್ವರ ಲಕ್ಷಣಗಳನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಮತ್ತು ಕಂಟೈನ್ ಮೆಂಟ್ ಝೋನ್ ಗಳಿಂದ ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳನ್ನು ಮೀಸಲಿಡುವಂತೆ ತಿಳಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಆರೋಗ್ಯ ಇಲಾಖೆ ವತಿಯಿಂದ ಪರೀಕ್ಷಾ ದ್ವಾರದಲ್ಲೇ ವಿದ್ಯಾರ್ಥಿಗಳು ಥರ್ಮಲ್ ಸ್ಕಾ ಮೂಲಕ ಪರಿಶೀಲಿಸಲು ಅಗತ್ಯ ಸಿಬ್ಬಂದಿ ನಿಯೋಜಿಸುವಂತೆ ಸೂಚನೆ ನೀಡಿದರು.
ಕೋವಿಡ್ ನಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಹಾಗೂ ಪರೀಕ್ಷಾ ಕೇಂದ್ರಕ್ಕೆ ಬರಲು ಸೂಕ್ತ ವಾಹನ ವ್ಯವಸ್ಥೆ ಮಾಡಲಾಗುವುದು.ಅಂತಹ ವಿದ್ಯಾರ್ಥಿಗಳು ತಮ್ಮ ವಿವರಗಳನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳ ದೂ.ಸಂ.98459 53978( ಗಿರೀಶ್ ) 94484 16987 ( ಮಂಜುನಾಥ ಭಟ್ ) ಇವರ ಬಳಿ ಮುಂಚಿತವಾಗಿ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಪರೀಕ್ಷೆ ಆರಂಭಕ್ಕೆ ಮುಂಚೆ ಮತ್ತು ಪರೀಕ್ಷೆಯ ನಂತರ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಹಾಗೂ ಅಲ್ಲಿನ ಶೌಚಾಲಯಗಳನ್ನು ಸ್ಯಾನಿಟೈಸ್ ಮಾಡುವ ಕುರಿತಂತೆ ಸಂಬAದಪಟ್ಟ ಸ್ಥಳೀಯ ನಗರಾಡಳಿತ ಸಂಸ್ಥೆಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ,ಪರೀಕ್ಷಾ ಕೇಂದ್ರಗಳಿಗೆ ಮತ್ತು ಪ್ರಶ್ನೆ ಪತ್ರಿಕೆ ಸಾಗಾಟಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಾರುತಿ, ಡಿಡಿಪಿಐ ಎನ್,ಹೆಚ್. ನಾಗೂರ, ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ್ದ ಅಧಿಕಾರಿಗಳು ಉಪಸ್ಥಿತರಿದ್ದರು.