ಕ್ರೀಡೆಯಿಂದ ಸಾಮಾಜಿಕ ಸ್ವಾಸ್ಥ್ಯ: ಹರೀಶ್‌ ಆರ್‌. ನಾಯ್ಕ್‌

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಬದುಕಿನಲ್ಲಿ ಯಶಸ್ಸು ಸಾಧಿಸಲು ಕ್ರೀಡೆ ಪ್ರಮುಖಪಾತ್ರ ವಹಿಸುತ್ತದೆ. ಇಂದಿನ ವೈಜ್ಞಾನಿಕ ಯುಗದಲ್ಲಿ ಮುನ್ನೆಡೆಯುತ್ತಿರುವ ಯುವ ಸಮುದಾಯ ಅರ್ಥಪೂರ್ಣವಾದ ಬದುಕನ್ನು ಕಟ್ಟಿಕೊಳ್ಳುವುದರ ಜೊತೆಯಲ್ಲಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕಾದ ಅಗತ್ಯ ಇದೆ ಎಂದು ಕುಂದಾಪುರ ಪೊಲೀಸ್‌ ಠಾಣೆಯ ಠಾಣಾಧಿಕಾರಿ ಹರೀಶ್ ಆರ್‌ ನಾಯ್ಕ್‌ ಹೇಳಿದರು.

ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ‘ವಿದ್ಯಾರ್ಥಿಗಳು ಶಿಕ್ಷಣ ಪಡೆದುಕೊಳ್ಳುವ ಶಿಕ್ಷಣ ಸಂಸ್ಥೆಗಳಲ್ಲಿ ಶೈಕ್ಷಣಿಕ ವಿಷಯಗಳ ಜೊತೆ ಜೊತೆಯಲ್ಲೇ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಸಾಮಾಜಿಕ ಜವಾಬ್ದಾರಿಗಳ ಕುರಿತು ವಿದ್ಯಾರ್ಥಿಗಳಿಗೆ ಆಸಕ್ತಿ ಬೆಳೆಸಿ, ಬೋಧನೆ ನೀಡುವುದರಿಂದ ನಮ್ಮ ಸಮಾಜದ ಭವಿಷ್ಯದ ಪ್ರಜೆಗಳ ಬಾಳು ಸಾರ್ಥಕವಾಗುತ್ತದೆ’ ಎಂದು ಹೇಳಿದರು.

ಅಂತರರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಗಿರೀಶ್ ಗೌಡ, ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಹಸ್ತಾಂತರಿಸಿದರು. ಪ್ರಾಂಶುಪಾಲ ಡಾ.ರಾಜೇಂದ್ರ ಎಸ್. ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ– ರಕ್ಷಕ ಸಂಘದ ಉಪಾಧ್ಯಕ್ಷ ಗುರುರಾಜ ನಾಯ್ಕ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಉಷಾದೇವಿ, ಐಕ್ಯೂಎಸಿ ಸಂಚಾಲಕ ಗಣೇಶ್ ಪೈ ಎಂ. ಇದ್ದರು.

ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಮೇಶ್ ಸ್ವಾಗತಿಸಿದರು. ಗಣಿತ ಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಅಡಿಗ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

5 × five =