ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಉಡುಪಿ ಜಿಲ್ಲೆ, ತಾಲೂಕು ಆರೋಗ್ಯ ಅಧಿಕಾರಿ ಕಛೇರಿ ಕುಂದಾಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿದ ಪೌಷ್ಠಿಕ ಪುನ:ಶ್ಚೇತನ ಶಿಬಿರ ಉದ್ಘಾಟನೆ ನಡೆಯಿತು.
ಉದ್ಘಾಟಿಸಿ ಮಾತನಾಡಿದ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ, ಅವೈಜ್ಞಾನಿಕ ಆಹಾರ ಪದ್ಧತಿಯಿಂದ ಹಾಗೂ ಜಂಕ್ ಫುಡ್‌ಗಳಿಂದ ಗರ್ಭಿಣಿಯರು ಹಾಗೂ ಮಕ್ಕಳಲ್ಲಿ ಅಪೌಷ್ಠಿಕತೆ ಕಾಡುತ್ತಿದೆ. ಕುಂದಾಪುರ ತಾಲೂಕಿನಲ್ಲಿ ಸುಮಾರು 300ಕ್ಕೂ ಮಿಕ್ಕಿ ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದು, ಇಂತಹ ಮಕ್ಕಳಿಗೆ ಸರಕಾರ ಪೌಷ್ಠಿಕ ಆಹಾರ ನೀಡಿ ಅವರಲ್ಲಿ ಪೌಷ್ಠಿಕತೆ ಹೆಚ್ಚಿಸುವ ಕಾರ್ಯ ಮಾಡುತ್ತಿದೆ. ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಕೂಡ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳು ಹಾಗೂ ಗರ್ಭಿಣಿಯರನ್ನು ಗುರುತಿಸಿ ಅವರಿಗೆ ಚಿಕಿತ್ಸೆ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.
ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ. ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ ಕುಲಕರ್ಣಿ, ಅಂಗನವಾಡಿ ಮೇಲ್ವಿಚಾರಕಿ ರಾಜೇಶ್ವರಿ, ರೋಟರಿ ಕಾರ್ಯದರ್ಶಿ ಎಂ. ನಾಗೇಂದ್ರ ಪೈ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಮಕ್ಕಳ ಪೋಷಕರು, ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಶುಶ್ರೂಷಕಿ ಶೋಭಾ ಕೆ. ಸ್ವಾಗತಿಸಿದರು. ಕಿರಿಯ ಆರೋಗ್ಯ ಸಹಾಯಕಿ ಸುಜಾತಾ ಎನ್. ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.