ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೦-೨೧ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಉದ್ಘಾಟನೆ ನಡೆಯಿತು.

ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಬಿ. ಎಸ್. ಸುರೇಶ್ ಶೆಟ್ಟಿ, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಅಗತ್ಯ. ಆ ಮೂಲಕ ವಿದ್ಯಾರ್ಥಿ ದೆಸೆಯಲ್ಲಿಯೇ ಆತ್ಮ ಸ್ಥೈರ್ಯದಿಂದ ಕಾರ್ಯಪ್ರವೃತ್ತರಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಮಾತನಾಡಿ, ಶಿಸ್ತು, ಸಂಯಮ, ನಿಷ್ಠೆ, ಶ್ರದ್ಧೆ ಇವುಗಳು ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕ ಎಂದರು.

ಇದೇ ಸಂದರ್ಭದಲ್ಲಿ ನೂತನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಫ್ರೆಶರ‍್ಸ್ ಡೇ ಕಾರ್ಯಕ್ರಮದಲ್ಲಿ ಸಿ.ಎಸ್. ಫೌಂಡೇಶನ್ ತೇರ್ಗಡೆ ಹೊಂದಿದ ಕಾಲೇಜಿನ 17 ವಿದ್ಯಾರ್ಥಿಗಳನ್ನು ಹಾಗೂ ದ್ವಿತೀಯ ಪಿ.ಯು.ಸಿಯಲ್ಲಿ ಶೇಕಡಾ 95ಕ್ಕಿಂತ ಹೆಚ್ಚು ಅಂಕಗಳಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು.

ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶಿವರಾಜ್ ಸಿ. ನಾವುಂದ ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ಸಂಪತ್ ಕುಮಾರ್ ಶೆಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿ, ವಿದ್ಯಾರ್ಥಿನಿ ಸುಪ್ರೀತಾ ನಿರೂಪಿಸಿದರು.

Leave a Reply

Your email address will not be published. Required fields are marked *

three × 2 =