ಬೆಂಗಳೂರು: ವೇತನ ತಾರತಮ್ಯ, ಕಾಲ್ಪನಿಕ ವೇತನ ಮತ್ತು ಬಡ್ತಿ ವಿಚಾರಗಳಿಗೆ ಸಂಬಂಧಿಸಿದಂತೆ ಬಹುದಿನಗಳಿಂದ ಇರುವ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಬುಧವಾರ ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರು ಹಾಗೂ ಪ್ರೌಢಶಾಲಾ ಶಿಕ್ಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಪದವಿ ಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ತೆರಳಿದ್ದ ಎರಡೂ ಸಂಘಗಳ ಪದಾಧಿಕಾರಿಗಳು, ಉಪನ್ಯಾಸಕರು ಮತ್ತು ಶಿಕ್ಷಕರು ಎದುರಿಸುತ್ತಿರುವ ವೇತನ ತಾರತಮ್ಯ ಸಮಸ್ಯೆ ನಿವಾರಣೆಗೆ ಕುಮಾರ ನಾಯಕ್ ವರದಿ ಜಾರಿಗೊಳಿಸಬೇಕು. ಉಪನ್ಯಾಸಕರ ಕಾಲ್ಪನಿಕ ವೇತನ ಬಿಡುಗಡೆಗೆ ಸುಮಾರು 50 ಕೋಟಿ ರೂ., ಪ್ರೌಢ ಶಾಲಾ ಶಿಕ್ಷಕರ ಕಾಲ್ಪನಿಕ ವೇತನ ಬಿಡುಗಡೆಗೆ ಸುಮಾರು 150 ಕೋಟಿ ರೂ. ಅಗತ್ಯವಿದೆ. ಹಣಕಾಸು ಇಲಾಖೆಯಿಂದ ಒಪ್ಪಿಗೆ ನೀಡಿ ಈ ಹಣ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.
ಅದೇ ರೀತಿ ಪ್ರೌಢ ಶಾಲಾ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಹುದ್ದೆಗೆ, ಪದವಿಪೂರ್ವ ಉಪನ್ಯಾಸಕರಿಗೆ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಹುದ್ದೆಗೆ ಬಡ್ತಿ ನೀಡುವ ಸಂಬಂಧವೂ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರನ್ನು ಕೋರಿದರು.
ಸಮಸ್ಯೆ ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶೀಘ್ರದಲ್ಲೇ ಶಿಕ್ಷಣ ಇಲಾಖೆ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳ ಸಭೆ ಕರೆದು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ ಎಂದು ಸಂಘಟನೆಗಳ ಪ್ರತಿನಿಧಿಗಳು ತಿಳಿಸಿದ್ದಾರೆ.