ಮರವಂತೆ ಹೊರಬಂದರು ಪ್ರದೇಶಕ್ಕೆ ಸಂಸದ, ಶಾಸಕರ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮರವಂತೆ : ಮರವಂತೆಯಲ್ಲಿ ಕೇರಳ ಮಾದರಿ ಹೊರಬಂದರು ನಿರ್ಮಾಣ ಕಾರ್ಯ ನಡೆದಿದ್ದು, ಈ ಬಂದರನ್ನು ತಾಂತ್ರಿಕವಾಗಿ ಇನ್ನಷ್ಟು ಅಭಿವೃದ್ಧಿಪಡಿಸಬೇಕೆಂಬ ಉದ್ದೇಶದಿಂದ ರಾಜ್ಯ ಸರಕಾರದ ಬಜೆಟ್‍ನಲ್ಲಿ 85 ಕೋಟರಿ ರೂ.ಗಳನ್ನು ಮೀಸಲಿರಿಸಿದ್ದು, ಆದಷ್ಟು ಶೀಘ್ರ ಟೆಂಡರ್ ನಡೆಸಿ ಕಾಮಗಾರಿ ಪ್ರಾರಂಭಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರಕಾರದ ಮೀನುಗಾರಿಕಾ ಸಚಿವರನ್ನು ಕರೆಸಿ ಕಾಮಗಾರಿಗೆ ಶಂಕುಸ್ಥಾಪನೆ ನಡೆಸಲಾಗುವುದು ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಮರವಂತೆ ಹೊರಬಂದರು ಪ್ರದೇಶಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಬಂದರು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕಾಮಗಾರಿಯ ನೀಲನಕಾಶೆಯನ್ನು ವೀಕ್ಷಿಸಿ ಅವರು ಮಾತನಾಡಿದರು.

ಕೋವಿಡ್-19 ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರೂ, ದೇಶದ ರಕ್ಷಣೆ ಜೊತೆಗೆ ಗ್ರಾಮದ ಅಭಿವೃದ್ಧಿಗೆ ಕೇಂದ್ರ ಸರಕಾರ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲೂ ಕೂಡ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಸರಕಾರ ಜಲಜೀವನ ಮಿಷನ್ ಅಡಿಯಲ್ಲಿ ಅನುದಾನ ದೊಡ್ಡ ಅನುದಾನ ನೀಡಿದ್ದು, ಆತ್ಮನಿರ್ಭರ್ ಯೋಜನೆಯಡಿ ಮೀನುಗಾರರಿಗೆ ವಿಶೇಷ ಪ್ಯಾಕೇಜ್ ಕೂಡ ನೀಡಿದೆ. ಮುಂದಿನ ದಿನಗಳಲ್ಲಿ ಮೀನುಗಾರರ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡು ಮೀನುಗಾರಿಕೆ ಹಾಗೂ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಅವರು ಹೇಳಿದರು.

ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಮಾತನಾಡಿ, ಬೈಂದೂರು ವಿಧಾನಸಭಾ ಕ್ಷೇತ್ರದ ಮರವಂತೆ ಹೊರಬಂದರು ಎರಡನೇ ಹಂತದ ಕಾಮಗಾರಿಗೆ 85 ಕೋಟಿ ಮತ್ತು ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಪುನರ್ ನಿರ್ಮಾಣಕ್ಕೆ 12 ಕೋಟಿ ಹಾಗೂ ಕೊಡೇರಿ ಬಂದರಿನ ಅಭಿವೃದ್ಧಿಗೆ ಸರಕಾರ ಅನುದಾನ ಬಿಡುಗಡೆ ಮಾಡಿದೆ. ಕುಡಿಯುವ ನೀರಿನ ಯೋಜನೆಗೆ ಸುಮಾರು 550 ಕೋಟಿ ರೂ. ಮಂಜೂರಾಗಿದೆ ಎಂದರು.

ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ರಾಜಪ್ಪ, ಮುಖ್ಯಮಂತ್ರಿಗಳ ತಾಂತ್ರಿಕ ಸಲಹೆಗಾರ ರಮೇಶ, ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ., ಬೈಂದೂರು ತಹಶೀಲ್ದಾರ್ ಬಸಪ್ಪ ಪೂಜಾರ್, ಬಂದರು ಇಲಾಖೆಯ ಸೂಪರಿಟೆಂಡೆಂಟ್ ಇಂಜಿನಿಯರ್ ಚಂದ್ರಶೇಖರ, ಎಕ್ಸಿಕ್ಯೂಟಿವ್ ಇಂಜಿನಿಯರ್ ಮಂಚೇಗೌಡ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಬೈಂದೂರು ತಾಪಂ ಅಧ್ಯಕ್ಷ ಮಹೇಂದ್ರ ಪೂಜಾರಿ, ಜಿಪಂ ಸದಸ್ಯರಾದ ಬಾಬು ಶೆಟ್ಟಿ, ಶಂಕರ ಪೂಜಾರಿ, ತಾಪಂ ಸದಸ್ಯರು, ಪಕ್ಷದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭ ಸ್ಥಳೀಯ ಮೀನುಗಾರರ ಪರವಾಗಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಮತ್ತು ರಾಜಪ್ಪ ಅವರನ್ನು ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *

twelve − seven =