ಕುಂದಾಪುರ: ಎಲ್ಲಾ ವೃತ್ತಿಗಿಂತ ಉಪನ್ಯಾಸಕರ ವೃತ್ತಿ ಶ್ರೇಷ್ಠವಾದದ್ದು, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಹೊರತರಲು ಮತ್ತು ಶೈಕ್ಷಣಿಕ ಸಾಧನೆಯೊಂದಿಗೆಮೌಲ್ಯಾಧರಿತ ಶಿಕ್ಷಣಕ್ಕೆ ಉಡುಪಿ ಜಿಲ್ಲೆ ಮಾದರಿಯಾಗಿದೆ. ಉತ್ತಮ ಯಶಸ್ಸಿನ ಹಿಂದೆ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಪಾತ್ರ ಶ್ಲಾಘನೀಯ ಎಂದು ಕೊಲ್ಲೂರು ಶ್ರೀ ಮೂಕಾಂಬಿಕ ದೇವಳದ ಕಾರ್ಯನಿರ್ವಣಾಧಿಕಾರಿ ವಿ.ಪ್ರಸನ್ನ ಹೇಳಿದರು.
ಅವರು ಉಡುಪಿ ಜಿಲ್ಲಾ ಪ.ಪೂ ಕಾಲೇಜು ಪ್ರಾಂಶುಪಾಲರ ಸಂಘ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ಪ.ಪೂ ಕಾಲೇಜು ಇವರ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ, ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಉಡುಪಿ ಜಿಲ್ಲಾ ಪ.ಪೂ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷೆ ಶ್ರೀಮತಿ ಇಂದಿರಾ.ಕೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ.ಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಬಿ.ನಾಯಕ್ ಪ್ರಾಂಶುಪಾಲರ ಸಂಘದ ಕಡೆಗೋಲು ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ನಂತರ ಅವರು ಮಾತನಾಡಿ, ದ್ವಿತೀಯ ಪಿಯುಸಿಯಲ್ಲಿ ಉತ್ತಮ ಪಲಿತಾಂಶ ದಾಖಲಿಸಿ, ಜಿಲ್ಲೆಗೆ ಕೀರ್ತಿ ತಂದ ಪ್ರಾಂಶುಪಾಲರನ್ನು ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ, ನಿವೃತ್ತರಾದ ಪದ್ಯಾಣ ಪರಮೇಶ್ವರ ಭಟ್, ಶ್ರೀಮತಿ.ಎಸ್.ರಾಧಾಮಣಿ, ಪಿ.ಕೆ.ಮೋಹನನ್, ನರೋನ, ರಾಮಮೂರ್ತಿ ಅವರನ್ನು ಸನ್ಮಾನಿಸಲಾಯಿತು. ದ್ವಿತೀಯ ಪಿಯುಸಿಯಲ್ಲಿ ಜಿಲ್ಲೆಯಲ್ಲಿಯೇ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಸಂಘದ ಕಾರ್ಯದರ್ಶಿ ಮೇಟಿ ಮುದಿಯಪ್ಪ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ನಾಗೇಶ್ ಶಾನುಬಾಗ್ ಅವವ್ಯಯ ಮಂಡಿಸಿದರು. ಕೊಲ್ಲೂರು ಶ್ರೀ ಮೂಕಾಂಬಿಕ ಪ.ಪೂ ಕಾಲೇಜಿನ ಪ್ರಾಂಶುಪಾಲ ಅರುಣ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಕೊಲ್ಲೂರು ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕ ಎಂ. ವಾಸುದೇವ ಉಡುಪ ಕಾರ್ಯಕ್ರಮ ನಿರೂಪಿಸಿದರು. ಕುಂದಾಪುರ ಸರಕಾರಿ ಪ.ಪೂ.ಕಾಲೇಜಿನ ಪ್ರಾಂಶುಪಾಲ ಸುಬ್ರಹ್ಮಣ್ಯ ಜೋಷಿ ವಂದಿಸಿದರು. ಬಳಿಕ 2015-16 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.