ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019 ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು, ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಜಿದಾರರು ಕನಿಷ್ಠ 18 ರಿಂದ 35 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ ಕನಿಷ್ಠ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯು ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿ ಅಥವಾ ಪರೋಕ್ಷವಾಗಿ ಮನನೋಯಿಸುವಂತ ವಿಷಯವಾಗಲಿ ಇರಬಾರದು. ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತ ವಿಷಯ/ ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಅರ್ಜಿಗಳನ್ನು ಏಪ್ರಿಲ್ 15 ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು, ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು, (ದೂರವಾಣಿ ಸಂಖ್ಯೆ: 080-22484516 / 22017704), ಅನ್ನು ಸಂಪರ್ಕಿಸುವಂತೆ ಪ್ರಾಧಿಕಾರದ ಆಡಳಿತಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

fifteen + 7 =