ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗಲಾರದು. ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದಿದ್ದರೆ ಸಾಧನೆ ಮಾಡಲು ಸಾಧ್ಯವಿದೆ. ಆದರೆ ನಿರಂತರ ಪರಿಶ್ರಮವಿಲ್ಲದೇ ಏನನ್ನೂ ಸಾಧಿಸಲಾಗದು ಎಂದು ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ಗೋವಿಂದ ಬಾಬು ಪೂಜಾರಿ ಹೇಳಿದರು.
ಸೋಮವಾರ ಬೈಂದೂರು ರತ್ತುಬಾಯಿ ಜನತಾ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನೀಡಲಾದ ಉಚಿತ ಸಮವಸ್ತ್ರವನ್ನು ವಿತರಿಸಿ ಮಾತನಾಡಿ ಯಶಸ್ಸನ್ನು ಕಾಣಲು ಮುನ್ನಡೆಯುವವರಿಗೆ ಯಾವುದಾದರೂ ರೂಪದಲ್ಲಿ ಸಹಕಾರ ಸಿಕ್ಕೇ ಸಿಗುತ್ತದೆ. ಅದನ್ನು ಸದುಪಯೋಗಪಡಿಸಿಕೊಳ್ಳುವ ಜಾಣ್ಮೆ ಇರಬೇಕು ಎಂದರು. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ದೇಣಿಗೆ ನೀಡಲಾಗುತ್ತಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬುದು ನನ್ನ ಉದ್ದೇಶವಾಗಿದೆ ಎಂದರು.
ರತ್ತುಬಾಯಿ ಜನತಾ ಪ್ರೌಢಶಾಲೆಯ 155 ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರ ವಿತರಿಸಿದರು. ಸಂಸ್ಥೆಯ ವತಿಯಿಂದ ಡಾ. ಗೋವಿಂದ ಬಾಬು ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ವಿವಿವಿ ಮಂಡಳಿ ಅಧ್ಯಕ್ಷರು, ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಸದಸ್ಯರಾದ ರಘುರಾಮ ಪೂಜಾರಿ, ಬೈಂದೂರು ಕ್ಷೇತ್ರ ಸಂಪನ್ಮೂಲ ಇಲಾಖೆಯ ಸಮನ್ವಯಾಧಿಕಾರಿ ಅಬ್ದುಲ್ ರವೂಫ್, ಜೆಸಿಐ ಸ್ಥಾಪಕಾಧ್ಯಕ್ಷ ಮಣಿಕಂಠ ದೇವಾಡಿಗ, ಹೆಮ್ಮಾಡಿ ಜನತಾ ಪ್ರೌಢಶಾಲಾ ಮುಖ್ಯೋಪಧ್ಯಾಯ ಮಂಜು ಕಾಳವಾರ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಧ್ಯಾಯರಾದ ಆನಂದ ಮದ್ದೋಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕರಾದ ಚಂದ್ರ ಕೆ. ದೇವಾಡಿಗ ಧನ್ಯವಾದಗೈದರು. ಪ್ರಕಾಶ್ ಮಾಕೋಡಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಶಿಕ್ಷಕಿಯರಾದ ನಿರ್ಮಲಾ, ಚೈತ್ರಾ, ಹೇಮಾವತಿ ಸಹಕರಿಸಿದರು.