ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭಿಸಿದ ಪೂರ್ವ ಪ್ರಾಥಮಿಕ ತರಗತಿಯನ್ನು ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಬುಧವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ಸಂಖ್ಯೆ ಕುಸಿದು, ಶಾಲೆ ಮುಚ್ಚುವ ಭೀತಿ ಎದುರಾಗಿದೆ. ಮರವಂತೆ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ಮತ್ತು ಪೋಷಕರು ಒಂದಾಗಿ ಅಗತ್ಯ ಸೌಲಭ್ಯಗಳನ್ನು ಸೃಜಿಸಿಕೊಂಡು ಪೂರ್ವ ಪ್ರಾಥಮಿಕ ತರಗತಿ ಆರಂಭಿಸುತ್ತಿರುವುದು ಒಂದು ಆಶಾದಾಯಕ ಬೆಳವಣಿಗೆ. ಇದರಿಂದ ಮಕ್ಕಳು ಊರಿನ ಶಾಲೆಯಲ್ಲಿ ಕಲಿಯುವಂತಾಗುತ್ತದೆ. ಶಾಲೆಯಲ್ಲಿ ವಿದ್ಯಾರ್ಥಿ ಸಂಖ್ಯೆಯೂ ಹೆಚ್ಚುತ್ತದೆ. ಇಲ್ಲಿನ ಪ್ರಯತ್ನ ಅನುಕರಣೀಯ ಎಂದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್. ಕೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗರಾಜ ಪಟಗಾರ್, ಸಮೂಹ ಸಂಪನ್ಮೂಲ ವ್ಯಕ್ತಿ ಸುನಿಲ್‌ಕುಮಾರ ಶೆಟ್ಟಿ, ದಾನಿ ಸತೀಶ ಪೂಜಾರಿ ಶುಭ ಹಾರೈಸಿದರು. ಮುಖ್ಯೋಪಾಧ್ಯಾಯ ಸತ್ಯನಾ ಕೊಡೇರಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಹಿರಿಯ ಸಹಾಯಕ ಶಿಕ್ಷಕಿ ಸಾವಿತ್ರಿ ವಂದಿಸಿದರು. ಸೀತಾರಾಮ ಕೊಠಾರಿ ನಿರೂಪಿಸಿದರು./