Kundapra.com ಕುಂದಾಪ್ರ ಡಾಟ್ ಕಾಂ

ಹೊಸ್ಮಠ: ಶಿಕ್ಷಕರ ವರ್ಗವಣೆಗೆ ವಿದ್ಯಾರ್ಥಿಗಳ ವಿರೋಧ. ಮೈದಾನದಲ್ಲೇ ಅಡಿಗೆ ಊಟ ಮಾಡಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇರುವ ಶಿಕ್ಷಕರನ್ನು ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನೆವದಲ್ಲಿ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಹೊಸಮಠ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಪೋಷಕರು ಶಾಲೆಗೆ ಬೀಗ ಜಡಿದು ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು.

ಶಾಲಾ ಮಕ್ಕಳು ತರಗತಿ ಬಹಿಷ್ಕರಿಸಿ ರಾಜ್ಯ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿ ಖಂಡಿಸಿ ತಮ್ಮ ಪೋಷಕರೊಂದಿಗೆ ಪ್ರತಿಭಟನೆ ನಡೆಸಿದರು. ಶಿಕ್ಷಕಿರನ್ನು ಹೆಚ್ಚುವರಿ ಶಿಕ್ಷಕರ ನೆವದಲ್ಲಿ ವರ್ಗಾವಣೆ ಮಾಡಿ, ಮಕ್ಕಳ ವಿದ್ಯಭ್ಯಾಸಕ್ಕೆ ತೊಂದರೆಯಾಗುತ್ತಿದ್ದು, ಇಲ್ಲಿರುವ ಶಿಕ್ಷಕರನ್ನು ಇಲ್ಲಿಯೇ ಉಳಿಸಿ ಮಕ್ಕಳ ವಿದ್ಯಭ್ಯಾಸಕ್ಕೆ ಅನುವು ಮಾಡಿಕೊಡಬೇಕೆಂದು ಪೋಷಕರು ಆಗ್ರಹಿಸಿದರು.

ಸರಕಾರಿ ಶಾಲೆ ಉಳಿಸಿಕೊಳ್ಳಬೇಕು ಎಂದು ಸರ್ಕಾರ ಹಲವಾರು ಯೋಜನೆ ರೂಪಿಸುತ್ತಿದೆ. ಆದರೆ ಹೆಚ್ಚುವರಿ ಶಿಕ್ಷಕರ ನೆವದಲ್ಲಿ ಶಿಕ್ಷಕರನ್ನು ವರ್ಗಾವಣೆ ಮಾಡಿ ಮಕ್ಕಳ ವಿದ್ಯಭ್ಯಾಸದ ಮೇಲೆ ಶಿಕ್ಷಣ ಇಲಾಖೆ ಚೆಲ್ಲಾಟವಾಡುತ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ. ವರ್ಗಾವಣೆ ಆದೇಶ ಹಿಂಪಡೆಯಬೇಕು ಇಲ್ಲವಾದಲ್ಲಿ ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವುದಿಲ್ಲವೆಂದು ಪ್ರತಿಭಟನಾಕಾರರು ಎಚ್ಚರಿಸಿದರು. ಮಧ್ಯಾಹ್ನದವರೆಗೂ ಶಿಕ್ಷಣಾಧಿಕಾರಿ ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಮಕ್ಕಳ ಪೊಷಕರು ತಮ್ಮ ಸ್ವಂತ ಖರ್ಚಿನಲ್ಲಿಯೇ ಅಡುಗೆ ಸಾಮಾಗ್ರಿಗಳನ್ನು ತಂದು ಶಾಲೆಯ ಹೊರಗಡಯೇ ಅಡುಗೆ ಮಾಡಿ ತಮ್ಮ ಆಕ್ರೋಶವನ್ನು ಹೊರಗೆಡವಿದ ಘಟನೆಯೂ ನಡೆಯಿತು. ಮಧ್ಯಾಹ್ನದ ಬಳಿಕ ಸ್ಥಳಕ್ಕಾಗಮಿಸಿದ ಸಿ.ಆರ್.ಪಿ ಅಹವಾಲು ಸ್ವೀಕರಿಸಿ ಇಲಾಖೆಯ ಗಮನಕ್ಕೆ ತರುವುದಾಗಿ ತಿಳಿಸಿದರು. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು ಪಾಲ್ಗೊಂಡಿದ್ದರು.

Exit mobile version