Kundapra.com ಕುಂದಾಪ್ರ ಡಾಟ್ ಕಾಂ

ಇಡೂರು ಕುಂಜ್ಙಾಡಿ ಗ್ರಾಪಂ ಅವ್ಯವಸ್ಥೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನೂತನವಾಗಿ ರಚನೆಗೊಂಡ ಇಡೂರು-ಕುಂಜ್ಞಾಡಿ ಗ್ರಾಮ ಪಂಚಾಯಿತಿಯಲ್ಲಿ ಆಡಳಿತ ವೈಫಲ್ಯ ಹಾಗೂ ಆಡಳಿತ ಪಕ್ಷದ ಸದಸ್ಯರು ಸರ್ವಾಧಿಕಾರಿ ಧೋರಣೆ ತಳೆಯುತ್ತಿದ್ದಾರೆ ಎಂದು ಆರೋಪಿಸಿರುವ ಗ್ರಾಮಸ್ಥರು, ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಇಡೂರು ಕುಂಜ್ಙಾಡಿ ಗ್ರಾಮ ಪಂಚಾಯಿತಿಯಲ್ಲಿ ಸಿಬ್ಬಂದಿ ಆಯ್ಕೆಯಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮರು ನೇಮಕಾತಿಗೆ ಆದೇಶ ನೀಡಿದ್ದರೂ ಯಾವುದೇ ಕ್ರಮಕ್ಕೆ ಗ್ರಾಮ ಪಂಚಾಯಿತಿ ಮುಂದಾಗಿಲ್ಲ ಎಂಬುದಾಗಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಆರೋಪಿಸಿದರು.

ಬಡ ಜನರಿಗೆ ಹಕ್ಕು ಪತ್ರ ನೀಡುವಲ್ಲಿಯೂ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಹೊಸೂರು ಗ್ರಾಮದಲ್ಲಿ ಅಂಗಡಿಗಳಲ್ಲಿ ಮದ್ಯ ಮಾರಾಟವನ್ನು ಅಕ್ರಮವಾಗಿ ನಡೆಸಲಾಗುತ್ತಿದೆಯಾದರೂ ಪಂಚಾಯಿತಿ ಮೌನ ವಹಿಸಿದೆ. ಸರ್ಕಾರೀ ಶಾಲೆಯೊಂದರ ಆವರಣ ಗೋಡೆ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಹಸ್ತಕ್ಷೇಪ ನಡೆಸಿ ಅಡಚಣೆ ಉಂಟುಮಾಡಿದ್ದಾರೆ. ಪಂಚಾಯಿತಿ ವ್ಯಾಪ್ತಯ ಬಹುತೇಕ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ. ಗ್ರಾಮ ಪಂಚಾಯಿತಿಯಲ್ಲಿ ಕೆಲವು ಸದಸ್ಯರು ಸರ್ವಾಧಿಕಾರ ಧೋರಣೆ ಅನುಸರಿಸುತ್ತಿದ್ದು, ಗ್ರಾಮಸ್ಥರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಸಾರ್ವಜನಿಕ ಬಸ್ ನಿಲ್ದಾಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಬೇಸಿಗೆಯಲ್ಲಿ ನಡೆದ ಕುಡಿಯುವ ನೀರು ಸರಬರಾಜಿನಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಗ್ರಾಮಸ್ಥರು ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಗ್ರಾಮ ಪಮಚಾಯಿತಿ ಪಿಡಿಓ ಅವರಿಗೆ ಮನವಿ ನೀಡಿದರು. ಪ್ರತಿಭಟನೆಯಲ್ಲಿ ಅಣ್ನಪ್ಪ ಇಡೂರು, ರಾಜು ನಾಯಕ್ಕ, ಗೋಪಾಲ, ಆನಂದ ಪೂಜಾರಿ, ಶೇಖರ್, ಐ ಉದಯ, ಸಿಪಿಐಎಂ ಮುಖಂಡ ಸುರೇಶ್ ಕಲ್ಲಾಗರ ಮೊದಲಾದವರು ನೇತೃತ್ವ ವಹಿಸಿದ್ದರು. ಪಿಡಿಓ ಜಯಂತ ಪಟಗಾರ್ ಮನವಿ ಸ್ವೀಕರಿಸಿದರು.

Exit mobile version