Kundapra.com ಕುಂದಾಪ್ರ ಡಾಟ್ ಕಾಂ

ಶಿಕ್ಷಣದಿಂದ ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ಹೊರಹೊಮ್ಮುವಂತಾಗಬೇಕು: ಡಾ. ಶಾಂತಾರಾಮ್

????????????????????????????????????

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಶಿಕ್ಷಣ ಕ್ಷೇತ್ರ ವಿಶಾಲವಾಗಿದ್ದು ಶಿಕ್ಷಣದ ಅರ್ಥವನ್ನು ಇಂದಿನ ಮಕ್ಕಳು ತಿಳಿದುಕೊಂಡು ತಮ್ಮ ಗುರಿಯನ್ನು ಅರಿತುಕೊಳ್ಳಬೇಕು. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮುಖ್ಯವಲ್ಲ. ಎಳೆಯ ವಿದ್ಯಾರ್ಥಿಗಳು ತಮ್ಮ ಗುರಿಯನ್ನು ನಿರ್ಧರಿಸಿಕೊಂಡು ತಮ್ಮ ಮುಂದಿನ ಸಾಧನೆಗಳ ಬಗ್ಗೆ ಸಿದ್ಧತೆ ನಡೆಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಸಾಮಾನ್ಯಜ್ಞಾನ ಬೆಳೆದು ಬರಬೇಕು. ಶಿಕ್ಷಣದಿಂದ ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ಹೊರಹೊಮ್ಮಬೇಕು. ಸೀಮಿತ ಪರೀಕ್ಷೆಗಳಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಿಲ್ಲ. ಎಂದು ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್‌ನ ಆಡಳಿತಾಧಿಕಾರಿ ಡಾ.ಎಚ್.ಶಾಂತಾರಾಮ ಹೇಳಿದರು.

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜಿಎಸ್‌ವಿಎಸ್ ಅಸೋಸಿಯೇಶನ್ ಆಶ್ರಯದಲ್ಲಿ ಜರಗಿದ ಸರಸ್ವತಿ ವಿದ್ಯಾಲಯ ಸಮೂಹ ವಿದ್ಯಾಸಂಸ್ಥೆಗಳ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಮಕ್ಕಳ ಹವ್ಯಾಸ ಆಸಕ್ತಿಯನ್ನು ಗಮನಿಸದೆ ಪೋಷಕರು ಆರ್ಥಿಕ ವ್ಯಾಮೋಹದಿಂದ ಮಕ್ಕಳ ಭವಿಷ್ಯವನ್ನು ರೂಪಿಸುತ್ತಿದ್ದಾರೆ. ವಿದ್ಯಾರ್ಥಿಗಳ ಮೇಲೆ ಹಾಕುವ ಒತ್ತಾಯ ಒತ್ತಡದಿಂದ ವಿದ್ಯಾರ್ಥಿಗಳ ಬೆಳವಣಿಗೆ ಕುಂಠಿತವಾಗುವ ಸಾಧ್ಯತೆಗಳಿವೆ. ಆದ್ದರಿಂದ ಮಕ್ಕಳನ್ನು ಮುಕ್ತ ವಾತಾವರಣದಲ್ಲಿ ಬೆಳೆಸಬೇಕು. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದು ಈ ಸಾಧನೆಯನ್ನು ಮುಂದಿನ ಜೀವನದಲ್ಲಿ ಉಳಿಸಿ ಬೆಳೆಸಬೇಕು ಎಂದು ಶುಭ ಹಾರರೈಸಿದರು.

ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಕುಂದಾಪುರ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಉಮೇಶ ಪುತ್ರನ್ ಶುಭ ಹಾರೈಸಿದರು. ಇದೇ ಸಂದರ್ಭ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಎಂ.ರಾಧಿಕಾ ಪೈ ಹಾಗೂ ಎಂಟನೇ ರ‍್ಯಾಂಕ್ ಪಡೆದ ಜಿ.ದಿಶಾ ಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ೨೦೧೬-೧೭ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.೯೦ಕ್ಕೂ ಅಧಿಕ ಅಂಕಗಳಿಸಿದ ಮತ್ತು ವಿಷಯವಾರು ೧೦೦ಕ್ಕೆ ೧೦೦ ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮತ್ತು ವಿಷಯವಾರು ೧೦೦ಕ್ಕೆ ೧೦೦ ಅಂಕ ಪಡೆದ ವಿಷಯಗಳ ಅಧ್ಯಾಪಕರನ್ನು ಅಭಿನಂದಿಸಲಾಯಿತು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶಾಲೆಯಲ್ಲಿ ಉನ್ನತ ಸ್ಥಾನ ಪಡೆದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಡಾ.ಉಮೇಶ್ ಪುತ್ರನ್ ಅವರು ಕೊಡ ಮಾಡಿದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.

ಜಿಎಸ್‌ವಿಎಸ್ ಅಸೋಸಿಯೇಶನ್ ಕಾರ್ಯದರ್ಶಿ ಎಚ್.ಗಣೇಶ ಕಾಮತ್, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಭಾರ ಉಪಪ್ರಾಂಶುಪಾಲ ಕೆ.ಸದಾನಂದ ವೈದ್ಯ, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ರಾಘವೇಂದ್ರ ಶೇರುಗಾರ್, ಜಿಎಸ್‌ವಿಎಸ್ ಅಸೋಸಿಯೇಶನ್‌ನ ಖಜಾಂಚಿ ಎನ್.ಅಶ್ವಿನ್ ನಾಯಕ್ ಉಪಸ್ಥಿತರಿದ್ದರು.

ಜಿಎಸ್‌ವಿಎಸ್ ಅಸೋಸಿಯೇಶನ್ ಸದಸ್ಯ ಕೆ.ರಾಮನಾಥ ನಾಯಕ್ ಸ್ವಾಗತಿಸಿದರು. ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ಸುಜಯೀಂದ್ರ ಹಂದೆ ಮತ್ತು ಥಾಮಸ್ ಪಿ.ಎ. ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಪ್ರಾಂಶುಪಾಲೆ ಕವಿತಾ ಎಂ.ಸಿ. ವಂದಿಸಿದರು.

 

Exit mobile version