Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬೈಂದೂರು ವಿಭಾಗ ಯೋಜನಾ ಕಛೇರಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ರೈತರಲ್ಲಿ ಹಾಗೂ ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ನಡೆದಿದೆ. ಕೃಷಿ ಚಟುವಟಿಕೆಗಳಿಂದ ದೂರ ಸರಿಯುತ್ತಿದ್ದ ರೈತರನ್ನು ಪುನ: ಕೃಷಿ ಚಟುವಟಿಕೆಗಳಲ್ಲಿ ತೊಡಗಿಸುವಲ್ಲಿ ಯೋಜನೆ ಯಶಸ್ವಿಯಾಗಿದೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಮಾಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಯೋಜನೆಯ ಪಾತ್ರ ಬಹುಮುಖ್ಯ ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.

ಅವರು ತ್ರಾಸಿಯ ರಾಷ್ಟ್ರೀಯ ಹೆದ್ದಾರಿ ಸಮೀಪದ ಶ್ರೀ ಅಂಬಾ ಕಾಂಪ್ಲೆಕ್ಸ್‌ನಲ್ಲಿ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ಇದರ ಕುಂದಾಪುರ ತಾಲೂಕಿನ ಬೈಂದೂರು ವಿಭಾಗದ ನೂತನ ಯೋಜನಾ ಕಛೇರಿಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರಕಾರದ ಸಹಭಾಗಿತ್ವದೊಂದಿಗೆ ಸರಕಾರದ ಯೋಜನೆಗಳ ಪ್ರಯೋಜನವನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸುವ ಉತ್ತಮ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿರುವುದು ಶ್ಲಾಘನೀಯ. ಗ್ರಾಮದ ಅಭ್ಯುದಯದ ಜೊತೆಗೆ ದುರ್ಬಲ ವರ್ಗದವರ ಸಬಲೀಕರಣದ ಉದ್ದೇಶ ಹೊಂದಿರುವ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಜ್ಯವ್ಯಾಪಿ ತನ್ನ ಕಾರ್ಯಚಟುವಟಿಕೆ ವಿಸ್ತರಿಸಿರುವುದು ಪ್ರಶಂಸನೀಯ ಎಂದರು.

ನೂತನ ಯೋಜನಾ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ ಅವರು ದುರ್ಬಲರನ್ನು ಹಾಗೂ ಮಹಿಳೆಯರನ್ನು ಸಂಘಟಿಸುವ ಮೂಲಕ ಅವರು ಶಿಸ್ತಿನ ಜಿವನ ನಡೆಸಲು ಯೋಜನೆ ಸಹಕಾರ ನೀಡುತ್ತಿದೆ. ಯೋಜನೆ ಪ್ರಾರಂಭವಾದ ಬಳಿಕ ಸಮಾಜದಲ್ಲಿ ಸಾಕಷ್ಟು ಉತ್ತಮ ಬದಲಾವಣೆಗಳಾಗಿದ್ದು, ಮಹಿಳಾ ಸಬಲೀಕರಣವಾಗಿದೆ. ಯೋಜನೆಯ ಸದಸ್ಯರ ಅನುಕೂಲಕ್ಕಾಗಿ ೧೦೦ ಗ್ರಾಮಗಳಲ್ಲಿ ಗ್ರಾಹಕ ಸೇವಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ದಿನದ ೨೪ ಗಂಟೆಗಳ ಕಾಲ ಬ್ಯಾಂಕಿಂಗ್ ವ್ಯವಹಾರ ನಡೆಸುವಂತಾಗಲು ಐಡಿಬಿಐ ಬ್ಯಾಂಕಿನ ಸಹಕಾರದೊಂದಿಗೆ ಗ್ರಾಹಕ ಸೇವಾ ಕೇಂದ್ರ ಆರಂಭಿಸುವುದರ ಜೊತೆಗೆ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಬಿ.ಅಪ್ಪಣ್ಣ ಹೆಗ್ಡೆ, ತ್ರಾಸಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜು ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯ ನಾರಾಯಣ ಕೆ. ಗುಜ್ಜಾಡಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಕುಂದಾಪುರ ಕೇಂದ್ರ ಸಮಿತಿ ಅಧ್ಯಕ್ಷ ಎಚ್.ಎಂ.ಕೃಷ್ಣ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ್, ಕಟ್ಟಡದ ಮಾಲೀಕ ಸುಧಾಕರ ಶೆಟ್ಟಿ ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪುರುಷೋತ್ತಮ ಪಿ.ಕೆ. ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೈಂದೂರು ವಲಯ ಮೇಲ್ವಿಚಾರಕ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು. ಬೈಂದೂರು ಯೋಜನಾಧಿಕಾರಿ ಶಶಿರೇಖಾ ವಂದಿಸಿದರು.

Exit mobile version