Kundapra.com ಕುಂದಾಪ್ರ ಡಾಟ್ ಕಾಂ

ಮಲೇರಿಯಾ ನಿಯಂತ್ರಣ ಮಾಸಾಚರಣೆ ಜನಜಾಗೃತಿ ಜಾಥಾ

?

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಸೊಳ್ಳೆಗಳಿಂದ ಹರಡುವ ಮಲೇರಿಯಾ ಹಾಗೂ ಡೆಂಗಿ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ನಮ್ಮ ಮನೆಯ ಪರಿಸರವನ್ನು ಶುಚಿಯಾಗಿ ಇಟ್ಟುಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ನಮ್ಮ ಮನೆಯ ಸುತ್ತಮುತ್ತ ಎಲ್ಲಿಯೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಂಡರೆ ಅನೇಕ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಸಹಾಯವಾಗುತ್ತದೆ ಎಂದು ತಾಲೂಕು ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ ಹೇಳಿದರು.

ಅವರು ಉಡುಪಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ರಾಷ್ಟ್ರೀಯ ರೋಗವಾಹನ ಶ್ರೀತ ರೋಗಗಳ ನಿಯಂತ್ರಣ ಕಾರ್ಯಕ್ರಮ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ, ಸ್ಪೂರ್ತಿ ಮಹಿಳಾ ಘಟಕ ದೊಡ್ಡಹಿತ್ಲು ಗಂಗೊಳ್ಳಿ ಇವರ ಸಹಯೋಗದೊಂದಿಗೆ ಬುಧವಾರ ಹಮ್ಮಿಕೊಳ್ಳಲಾದ ಮಲೇರಿಯಾ ನಿಯಂತ್ರಣ ಮಾಸಾಚರಣೆ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರೇಮಾನಂದ ಮಾತನಾಡಿ ಸೊಳ್ಳೆ ನಿಯಂತ್ರಣ ಕ್ರಮಗಳಿಂದ ಮಲೇರಿಯಾಮ ಫೈಲೇರಿಯಾ, ಡೆಂಗಿ, ಚಿಕುಂಗುನ್ಯ, ಮೆದುಳುಜ್ವರ ಮತ್ತು ಕಾಲರಾ ರೋಗಗಳನ್ನು ನಿಯಂತ್ರಿಸಬಹುದು. ಮಲೇರಿಯಾ ರೋಗ ಹಾಗೂ ಡೆಂಗಿ ಜ್ವರವು ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗವಾಗಿದೆ. ನೀರಿರುವ ಗದ್ದೆ, ಕೆರೆಗಳು, ಕೊಳಚೆ ನೀರು, ಉಪಯೋಗಿಸದ ಬಾವಿ, ಮನೆಯ ಸುತ್ತಮುತ್ತ ನಿಂತ ನೀರು ಇವೆಲ್ಲ ಸೊಳ್ಳೆ ಬೆಳೆಯುವ ತಾಣಗಳಾಗಿದ್ದು, ನೀರು ನಿಲ್ಲುವ ಸ್ಥಳಗಳಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ತಡೆಗಟ್ಟುವುದರಿಂದ ಮಲೇರಿಯಾ, ಡೆಂಗಿ ಜ್ವರವನ್ನು ತಡೆಗಟ್ಟಬಹುದಾಗಿದೆ ಎಂದು ಹೇಳಿದರು.

ಚಳಿ ಮತ್ತು ನಡುಕದ ಜೊತೆ ಜ್ವರ, ಅತಿಯಾದ ಜ್ವರ, ವಾಂತಿ, ತಲೆನೋವು, ಜ್ವರ ಕಡಿಮೆಯಾಗುವ ಸಮಯದಲ್ಲಿ ಬೆವರುವುದು, ಜ್ವರ ಕಡಿಮೆಯಾದ ಬಳಿಕ ಸುಸ್ತು ಮತ್ತು ನಿಶ್ಯಕ್ತಿಯಾಗುವುದು, ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು ಈ ರೋಗಗಳ ಪ್ರಮುಖ ಲಕ್ಷಣಗಳಾಗಿದ್ದು, ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತದೆ. ಇಂತಹ ಸಂದರ್ಭಗಳಲ್ಲಿ ಕೂಡಲೇ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಅಥವಾ ಸ್ಥಳೀಯ ವೈದ್ಯರನ್ನು ಭೇಟಿ ನೀಡಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು ಮತ್ತು ವೈದ್ಯರ ಸಲಹೆಯಂತೆ ಮಾತ್ರೆಗಳನ್ನು ಸೇವಿಸಬೇಕು. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪರದೆಯನ್ನು ಬಳಸಿ ಸೊಳ್ಳೆಗಳು ಕಚ್ಚದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.

ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ವೇತಾ, ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಜಿ.ವಿಠಲ ಶೆಣೈ, ಮಾಜಿ ಅಧ್ಯಕ್ಷ ಬಿ.ರಾಘವೇಂದ್ರ ಪೈ, ಸ್ಪೂರ್ತಿ ಮಹಿಳಾ ಘಟಕದ ಅಧ್ಯಕ್ಷೆ ರೇವತಿ, ಸ.ವಿ.ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಶಿಕ್ಷಕಿ ಜ್ಯೋತಿ, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಹಶಿಕ್ಷಕ ಆದಿನಾಥ ಕಿಣಿ, ಸ.ವಿ. ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಶೆಟ್ಟಿ, ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Exit mobile version