Kundapra.com ಕುಂದಾಪ್ರ ಡಾಟ್ ಕಾಂ

ಬಾಲ ಕಾರ್ಮಿಕರ ಬಳಕೆ ಶಿಕ್ಷಾರ್ಹ ಅಪರಾಧ- ನ್ಯಾ.ವೆಂಕಟೇಶ್ ನಾಯ್ಕ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಕುಂದಾಪುರದ ಭಂಡಾರ್‌ಕಾರ‍್ಸ್ ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ಜಿಲ್ಲಾಡಳಿತ ಉಡುಪಿ ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸಂಘ ಮತ್ತು ವಕೀಲರ ಸಂಘ ಉಡುಪಿ ಮತ್ತು ಭಂಡಾರ್‌ಕಾರ‍್ಸ್ ಆರ್ಟ್ಸ್ & ಸೈನ್ಸ್ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಕಾರ್ಯಕ್ರಮ ಜರುಗಿತು.

ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕ ಟಿ. ಇವರು ಮಾತನಾಡಿ ಯಾವುದೇ ಉದ್ಯಮಗಳಲ್ಲಿ ಬಾಲ ಕಾರ್ಮಿಕರನ್ನು ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ, ಈ ಅಪರಾಧಕ್ಕಾಗಿ ರೂ.50,000 ಗಳ ವರೆಗಿನ ದಂಡ ಹಾಗೂ 2 ವರ್ಷದೊಳಗಿನ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಹೇಳಿದರು.

ಬಡತನ, ಅನಕ್ಷರತೆ ಮತ್ತು ಷೋಷಕರ ಆರ್ಥಿಕ ದುಸ್ಥಿತಿಯಿಂದ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ, ಪಟಾಕಿ, ತಯಾರಿಕೆ, ಸಿಮೆಂಟ್ ಉದ್ಯಮ, ರೈಲ್ವೆ ಕಾಮಗಾರಿ ಮುಂತಾದ ಅಪಾಯಕಾರಿ ಉದ್ದಿಮೆಗಳಲ್ಲ್ಲಿ ಬಾಲ ಕಾರ್ಮಿಕರನ್ನು ಬಳಸುವುದು ನಿಷೇಧಿಸಲಾಗಿದ್ದು, ಅಂತಹ ಸಂಸ್ಥೆಗಳ ಮಾಲೀಕರಿಗೆ ಶಿಕ್ಷೆ ಮತ್ತು ದಂಡ ವಿಧಿಸಲಾಗುವುದು, ಮಕ್ಕಳು ಬೆಳಯುವ ಪರಿಸರ ಉತ್ತಮವಾಗಿದ್ದರೆ , ಮಕ್ಕಳಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗಲಿದೆ, ಮಕ್ಕಳ ಪರಿಸ್ಥಿತಿ ಉತ್ತಮವಾಗಿದ್ದರೆ ದೇಶದ ಅಭಿವೃದ್ದಿ ಸಾಧ್ಯ ಎಂದು ಜಿಲ್ಲಾ ನ್ಯಾಯಾಧೀಶರು ಹೇಳಿದರು.

ಬಾಲ ಕಾರ್ಮಿಕ ಕಾನೂನಿನ ಕುರಿತು ಎಲ್ಲರೂ ಅರಿವು ಹೊಂದಿರಬೇಕು, ತಮ್ಮ ಸುತ್ತಮುತ್ತಲಿನ ಉದ್ದಿಮೆಗಳಲ್ಲಿ ಬಾಲ ಕಾರ್ಮಿಕರು ಕಂಡರೇ ಕೂಡಲೇ ಸಮೀಪದ ಪೊಲೀಸ್ ಠಾಣೆ ಅಥವಾ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಬೇಕು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತಂತೆ , ಕಡ್ಡಾಯ ಶಿಕ್ಷಣ ಹಕ್ಕು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ, ಬಾಲ ಕಾರ್ಮಿಕರಿಗೆ ಪುರ್ನವಸತಿ , ಮಕ್ಕಳ ಕಲ್ಯಾಣ ನಿಧಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಸಾರ್ವಜನಿಕರು ಮತ್ತು ಸ್ವಯಂ ಸೇವಾ ಸಂಘಟನೆಗಳು ಸರಕಾರದೊಂದಿಗೆ ಕೈ ಜೋಡಿಸಬೇಕಿದೆ ಎಂದು ನ್ಯಾ. ವೆಂಕಟೇಶ್ ನಾಯ್ಕ ಟಿ ಹೇಳಿದರು.

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಪ್ರಕಾಶ್ , ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ದತಿ ನಿಷೇಧ ಕುರಿತು ಪ್ರತಿಜ್ಞಾ ವಿಧಿ ಭೋಧಿಸಿದರು.

ಕುಂದಾಪುರ ಸಹಾಯಕ ಆಯುಕ್ತ ಭೂ ಬಾಲನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕುಂದಾಪುರದ ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ಪಿ.ಕುಮಾರ ಸ್ವಾಮಿ, ಹಿರಿಯ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ, ಕುಂದಾಪುರ ಡಿವೈಎಸ್ಪಿ ದಿನೇಶ್ ಕುಮಾರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ, ಕುಂದಾಪುರ ವಕೀಲರ ಸಂಘದ ಕಾರ್ಯದರ್ಶಿ ಪ್ರಮೋದ್ ಹಂದೆ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೊನಾಲ್ಡ್ ಬಿ ಫುರ್ಟಡೋ, ಭಂಡಾರ್‌ಕಾರ‍್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಪಿ. ನಾರಾಯಣ ಶೆಟ್ಟಿ, ಭಂಡಾರ್‌ಕಾರ‍್ಸ್ ಪ.ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ. ಗೊಂಡ, ಸಂಪನ್ಮೂಲ ವ್ಯಕ್ತಿ ಕಾರ್ಮಿಕ ನಿರೀಕ್ಷಕ ರಾಮಮೂರ್ತಿ ಉಪಸ್ಥಿತರಿದ್ದರು.

ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತು ಅರಿವು ಮೂಡಿಸಲು, ಕಲಾಕೇಂದ್ರ ಕೋಟೇಶ್ವರ ಇವರಿಂದ ಯಕ್ಷಗಾನ ಕಾರ್ಯಕ್ರಮ ನಡೆಯಿತು.

ಪ್ರಭಾರ ಜಿಲ್ಲಾ ಕಾರ್ಮಿಕ ಅಧಿಕಾರಿ ಮಲ್ಲಿಕಾರ್ಜುನ್ ಜೋಗೂರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸಂಘದ ಯೋಜನಾ ನಿರ್ದೇಶಕ ಪ್ರಭಾಕರ್ ಅಚಾರ್ ನಿರೂಪಿಸಿದರು.

Exit mobile version