Kundapra.com ಕುಂದಾಪ್ರ ಡಾಟ್ ಕಾಂ

ಸಮಾಜ ವಿಘಟಿಸುವ ಶಕ್ತಿಗೆ ಉಪಚುನಾವಣೆ ಮೂಲಕ ತಕ್ಕ ಉತ್ತರ: ಸಚಿವೆ ಜಯಮಾಲಾ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಮಾಜವನ್ನು ಒಡೆದು ಆಳುವ ಪರಿಪಾಠವನ್ನು ಮೈಗೂಡಿಸಿಕೊಂಡಿರುವ ಬಿಜೆಪಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಒಗ್ಗಟ್ಟಾಗಿ ಪಾಠ ಕಲಿಸಬೇಕಿದೆ. ಪ್ರೀತಿ ಹಾಗೂ ವಿಶ್ವಾಸಕ್ಕಿಂತ ದೊಡ್ಡ ಧರ್ಮವಿಲ್ಲ. ಸುಳ್ಳಿನ ಮೂಲಕ ಸಮಾಜ ವಿಘಟಿಸುವ ಶಕ್ತಿಯ ವಿರುದ್ಧ ಧ್ವನಿ ಎತ್ತಬೇಕಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಹೇಳಿದರು.

ಅವರು ಬೈಂದೂರು ರೋಟರಿ ಭವನದಲ್ಲಿ ಜರುಗಿದ ಬೈಂದೂರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಬೆಂಬಲಿಸುವ ಸಲುವಾಗಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಮ್ಮರವಾಗಿ ಬೆಳೆದಿದೆ. ಅಡುಗೆ ಅನಿಲ ಬೆಲೆ ಗಗನಕ್ಕೇರಿದೆ. ಆದರೆ ಭರವಸೆಗಳನ್ನು ನೀಡಿ ಅಧಿಕಾರ ಹಿಡಿದ ಕೇಂದ್ರ ಸರಕಾರ ಈ ಬಗ್ಗೆ ಚಕಾರವೆತ್ತುತ್ತಿಲ್ಲ. ಈ ಸಂದರ್ಭದಲ್ಲಿ ಕಾಂಗ್ರೆಸ್ ಜೆಡಿಎಸ್ ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಕೋಮವಾದ ಪಕ್ಷವನ್ನು ಎದುರಿಸಿ ಗೆಲ್ಲಬೇಕಾಗಿದೆ ಎಂದರು.

ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಮಾತನಾಡಿ ಉಪ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವರ್ಧಿಸುತ್ತಿರುವುದು ಅಪೂರ್ವ ಸಂದರ್ಭ ಎಂದು ಭಾವಿಸುತ್ತೇನೆ. ಬಂಗಾರಪ್ಪನವರ ಕರಾವಳಿ ಭಾಗದಲ್ಲಿ ಹೊಂದಿದ್ದ ನಂಟನ್ನು ಹಾಗೆಯೇ ಇಟ್ಟುಕೊಂಡು ಅವರ ಚಿಂತನೆಗಳನ್ನು ಮುನ್ನಡೆಸಿಕೊಂಡು ಹೋಗುವ ಹಂಬಲವಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಗೆ ಈ ಭಾರಿಗೆ ಗೆಲುವು ನಿಶ್ಚಿತ ಎಂದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಆನಂದ ಆಸ್ನೋಟಿಕರ್, ಅಲ್ಪಸಂಖ್ಯಾತರ ನಿಗಮದ ಅಧ್ಯಕ್ಷ ಎಂ.ಎ ಗಪೂರ್, ಇಂಟಿಕ್ ಅಧ್ಯಕ್ಷ ರಾಕೇಶ್ ಮಲ್ಲಿ, ಉಸ್ತುವಾರಿ ಬಿ.ಎ. ಮೊಹಮ್ಮದ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೇಶ್ ಶೆಟ್ಟಿ, ಜೆಡಿಎಸ್ ಮುಖಂಡ ರವಿ ಶೆಟ್ಟಿ, ಬೈಂದೂರು ಜೆಡಿಎಸ್ ಅಧ್ಯಕ್ಷ ಸಂದೇಶ್ ಭಟ್ ಮೊದಲಾದವರು ಇದ್ದರು.

ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ ಸ್ವಾಗತಿಸಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ ನಿರೂಪಿಸಿದರು.

Exit mobile version