Kundapra.com ಕುಂದಾಪ್ರ ಡಾಟ್ ಕಾಂ

ಸರಕಾರಿ ಶಾಲೆಯಲ್ಲಿ ಮಕ್ಕಳ ಉಳಿವಿಗೆ ಒಂದನೇ ತರಗತಿಯಿಂದ ಆಂಗ್ಲ ಭಾಷಾ ಭೋದನೆ ಅನಿವಾರ್ಯ: ಶಾಸಕ ಬಿ.ಎಂ.ಎಸ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಒಂದನೇ ತರಗತಿಯಿಂದಲೇ ಇಂಗ್ಲೀಷ್ ಕಲಿಕೆಗೆ ಒತ್ತುಕೊಡುವುದರಿಂದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಲು ಸಾಧ್ಯವಿದೆ. ಹಳೆ ವಿದ್ಯಾರ್ಥಿ ಸಂಘಗಳು ನುರಿತ ಆಂಗ್ಲ ಭಾಷಾ ಶಿಕ್ಷಕರನ್ನು ನೇಮಿಸುವ ಹಂತದಲ್ಲಿ ಹಾಗೂ ಶಿಕ್ಷಣದ ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ಶಾಲಾ ಶಿಕ್ಷಕರಿಗೆ ನೆರವಾದರೆ ಮಕ್ಕಳ ದಾಖಲಾತಿಯೂ ಹೆಚ್ಚಲಿದೆ ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು.

ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಡ್ತರೆ ಇದರ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಮತ್ತು ಶಾಲಾ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಯಡ್ತರೆ, ಬೈಂದೂರು, ಪಡುವರಿ ಭಾಗದಲ್ಲಿ ಕುಡಿಯುವ ನೀರಿಗೆ ಬೇಡಿಕೆ ಹೆಚ್ಚಿದ್ದು ಅದನ್ನು ಬಗೆಹರಿಸುವುದೇ ಒಂದು ಸವಾಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ಕರೆಯಲಾಗಿದ್ದು ಪರಿಹಾರೋಪಾಯಗಳ ಬಗ್ಗೆ ಚರ್ಚಿಸಲಾಗುತ್ತದೆ. ಜತೆಗೆ ಜಲಧಾರೆ ಕುಡಿಯುವ ನೀರಿನ ಯೋಜನೆಗೆ ಅನುಷ್ಠಾನಕ್ಕೆ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಶಾಲೆಯ ಹಳೆ ವಿದಾರ್ಥಿ, ಎಸ್‌ಬಿಐ ಬ್ಯಾಂಕ್ ಪ್ರಬಂಧಕ ಚಂದ್ರ ದೇವಾಡಿಗ ಯಡ್ತರೆ ಸ್ವಸ್ತಿ ವಾಚನ ಮಾಡಿದರು. ವಿವಿಧ ಸ್ವರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ತಗ್ಗರ್ಸೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಟಿ. ಶಂಕರ ಪೂಜಾರಿ, ಸುರೇಶ್ ಬಟವಾಡಿ, ತಾಲೂಕು ಪಂಚಾಯತ್ ಸದಸ್ಯ ಪುಪ್ಪರಾಜ ಶೆಟ್ಟಿ, ಬೈಂದೂರು ಶಿಕ್ಷಣ ಇಲಾಖೆ ಸಿಆರ್‌ಪಿ ದಿನಕರ್, ಬೈಂದೂರು ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ, ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ ಪೂಜಾರಿ, ಉದ್ಯಮಿ ಹುಸೇನ್ ಯಡ್ತರೆ, ಗೌರವ ಸಲಹೆಗಾರರಾದ ಜ್ಯೋತಿ ಶೆಟ್ಟಿ, ಎಸ್. ರಾಜು ಪೂಜಾರಿ, ಡಾ. ವಿಥುನ್ ಶೆಟ್ಟಿ ಯಡ್ತರೆ, ಉಪಾಧ್ಯಕ್ಷ ವಿಕ್ರಮ ಪೂಜಾರಿ ಯಡ್ತರೆ ಮೊದಲಾದವರು ಇದ್ದರು.

ಹಳೆ ವಿದಾರ್ಥಿ ಸಂಘದ ಅಧ್ಯಕ್ಷ ಸುಧಾಕರ ದೇವಾಡಿಗ ಯಡ್ತರೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಧಾನ ಕಾರ್ಯದರ್ಶಿ ನಾರಾಯಣ ಕೆ. ಬಿಲ್ಲವ ದುರ್ಮಿ ವಾರ್ಷಿಕ ವರದಿ ವಾಚಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಪಾರ್ವತಿ ಎಂ. ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ರಾಘವೇಂದ್ರ ದೇವಾಡಿಗ ಕಳವಾಡಿ ಕಾರ್ಯಕ್ರಮ ನಿರೂಪಿಸಿದರು.

Exit mobile version