ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಅಧಿಕಾರಿ ಉಡುಪಿ, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಉಡುಪಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಇವರ ಸಹಯೋಗದೊಂದಿಗೆ ಮಲೇರಿಯಾ ಮಾಸಾಚರಣೆ ಕಾರ್ಯಕ್ರಮ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ಜರಗಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಂಜಿತ್ ಜಿ., ಪರಿಸರದಲ್ಲಿ ಸ್ವಚ್ಛತೆ, ನೈರ್ಮಲ್ಯ ಕಾಪಾಡಿಕೊಳ್ಳುವುದರಿಂದ ಅನೇಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು. ಮನೆ ವಠಾರ ಹಾಗೂ ಪರಿಸರದಲ್ಲಿ ನೀರು ನಿಲ್ಲದಂತೆ ಕ್ರಮಕೈಗೊಳ್ಳಬೇಕು. ಕರೋನಾ ವೈರಸ್ ಹರಡುತ್ತಿರುವ ಈ ದಿನಗಳಲ್ಲಿ ಎಲ್ಲರೂ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಹೇಳಿದರು.
ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಲೇರಿಯಾ ರೋಗದ ಬಗ್ಗೆ ಮಾಹಿತಿಯುಳ್ಳ ಕರಪತ್ರವನ್ನು ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ ಬಿಡುಗಡೆಗೊಳಿಸಿದರು. ಉದ್ಯಮಿ ರಾಜೇಶ ಎಂ.ಜಿ. ಅವರು ಉಚಿತವಾಗಿ ನೀಡಿದ ಮಾಸ್ಕ್‌ಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ವಿತರಿಸಲಾಯಿತು. ರೋಟರಿ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.
ಕೆ.ರಾಮನಾಥ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಎಂ.ನಾಗೇಂದ್ರ ಪೈ ವಂದಿಸಿದರು.