Kundapra.com ಕುಂದಾಪ್ರ ಡಾಟ್ ಕಾಂ

ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರಕಾರದ ಸೌಲಭ್ಯ ದೊರಕಿಸುವ ಗುರಿ: ಸಂಸದ ಬಿ. ವೈ. ರಾಘವೇಂದ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ಸೌಕರ್ಯವನ್ನು ಒದಗಿಸುವುದು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಆದ್ಯತೆಯಾಗಿದ್ದು, ಆ ನೆಲೆಯಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ. ರಾಜ್ಯ ಸರ್ಕಾರ ಬೈಂದೂರು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ ಈತನಕ ಅತ್ಯಧಿಕ ಅನುದಾನ ಒದಗಿಸಿದ್ದು, ಮುಂದಿನ ಎರಡು ವರ್ಷಗಳಲ್ಲಿ ಬಹುಪಾಲು ಯೋಜನೆಗಳು ಸಾಕಾರಗೊಳ್ಳಲಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಹೇಳಿದರು.

ಅವರು ಮಂಗಳವಾರ ಬೈಂದೂರಿನಲ್ಲಿ ಪಟ್ಟಣ ಪಂಚಾಯತ್, ಅಗ್ನಿಶಾಮಕ ಠಾಣೆ, ಮೆಸ್ಕಾಂ ಸಬ್‌ಸ್ಟೇಷನ್ ಉದ್ಘಾಟನೆ ಹಾಗೂ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಿದ ಬಳಿಕ ಬಳಿಕ ಇಲ್ಲಿನ ಜೆ.ಎನ್. ಕಲಾ ಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವು ನದಿ ಹರಿಯುತ್ತಿದ್ದರೂ ಇಲ್ಲಿನ ಜನ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಕ್ಷೇತ್ರದ ಪ್ರತಿ ಮನೆಗೂ ಶುದ್ಧ ಕುಡಿಯುವ ನಿರು ಪೂರೈಸುವುದು ನಮ್ಮ ಮೊದಲ ಆದ್ಯತೆಯಾಗಿದ್ದು, ಈ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರದಿಂದ 200 ಕೋಟಿ ರೂ. ಅನುದಾನ ಮಂಜೂರಾಗಿದೆ, ಮುಂದಿನ ಎರಡು ವರ್ಷದೊಳಗೆ ಎಲ್ಲಾ ಮನೆಗೂ ಶುದ್ಧ ಕುಡಿಯುವ ನೀರು ಪೂರೈಸಲು ಯೋಜನೆ ರೂಪಿಸಲಾಗಿದೆ

ಹಿಂದುಳಿದ ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆಗಾಗಿ ಸುಮಾರು 100 ಎಕ್ರೆ ಜಾಗ ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದ ಅವರು ಆಧುನಿಕ ಚಿತಾಗಾರ ನಿರ್ಮಾಣಕ್ಕೂ ಅಗತ್ಯ ಕ್ರಮ ಹಾಗೂ ನವ್ಯದ ಹರಿಕಾರ ಕವಿ ಗೋಪಾಲಕೃಷ್ಣ ಅಡಿಗರ ಹೆಸರಿನಲ್ಲಿ ಸುಮಾರು 4.5 ಕೋಟಿ ರೂ. ವೆಚ್ಚದಲ್ಲಿ ಇನ್‌ಡೋರ್ ಆಡಿಟೋರಿಯಂ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ ಎಂದರು. ಕ್ಷೇತ್ರ ವ್ಯಾಪ್ತಿಯಲ್ಲಿ ಖಾಲಿ ಜಾಗವನ್ನು ಗುರುತಿಸಿ, ನಿವೇಶನ ರಹಿತರಿಗೆ ನಿವೇಶನ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಈಗಾಗಲೇ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಕ್ಕೆ ಸೂಚನೆ ನೀಡಲಾಗಿದೆ. ಅಲ್ಲದೇ ವಸತಿ ರಹಿತರಿಗೆ ವಸತಿ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗುವುದು ಎಂದರು.

ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೈಂದೂರು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ ಸುಮಾರು 1350 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಅದರಲ್ಲಿ 110 ಕೋಟಿ ರೂ. ವೆಂಟೆಡ್ ಡ್ಯಾಮ್ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದೆ. ಕಳೆದ ಹಲವು ವರ್ಷಗಳಲ್ಲಯೇ ಕ್ಷೇತ್ರಕ್ಕೆ ನಿರೀಕ್ಷೆಗೂ ಮೀರಿದ ಅನುದಾನ ಬಂದಿದೆ ಎಂದರು.

ಉಡುಪಿ ಜಿಲ್ಲಾಕಾರಿ ಜಿ. ಜಗದೀಶ್ ಮಾತನಾಡಿ, ನೂತನ ಬೈಂದೂರು ಕಡತಗಳ ವಿಲೇವಾರಿಯಲ್ಲಿ ರಾಜ್ಯದಲ್ಲಿಯೇ ಮೂರನೇ ಸ್ಥಾನದಲ್ಲಿದ್ದು, ಇದು ಇಲ್ಲಿನ ಅಧಿಕಾರಿಗಳ ಕಾರ್ಯದಕ್ಷತೆಯನ್ನು ಸೂಚಿಸುತ್ತದೆ. ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿದ ಅಗ್ರ ಹತ್ತು ತಾಲೂಕುಗಳ ಪೈಕಿ ಉಡುಪಿ ಜಿಲ್ಲೆಯ ತಾಲೂಕುಗಳೇ ಇರುವುದು ಜಿಲ್ಲೆಯಲ್ಲಿ ಆಡಳಿತ ಯಂತ್ರ ಕ್ಷಿಪ್ರವಾಗಿ ಕಾರ್ಯಾಚರಿಸುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದ ಬೈಂದೂರು ತಾಲೂಕಿನಲ್ಲಿ ಎಲ್ಲಾ ಕಚೇರಿ ತೆರೆಯಲು ಈಗಾಗಲೇ ಜಾಗ ಗುರುತಿಸುವ ಕಾರ್ಯ ನಡೆದಿದೆ ಎಂದರು.

ರಾಜ್ಯ ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಿಂದಲೇ ಅಗ್ನಿಶಾಮಕ ಠಾಣೆಯನ್ನು ವರ್ಚುವಲ್ ಉದ್ಘಾಟನೆ ಮಾಡಿ ಶುಭಹಾರೈಸಿದರು. ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಕಾರಿ ಪ್ರೀತಿ ಗೆಹ್ಲೋಟ್, ಅಗ್ನಿಶಾಮಕದಳ ಮಂಗಳೂರು ವಲಯದ ವಲಯಾಕಾರಿ ತಿಪ್ಪೇಸ್ವಾಮಿ, ಸಿಎಂ ಕಾರ್ಯದರ್ಶಿ ರಾಜಪ್ಪ, ಸಹಾಯಕ ಕಾರ್ಯದರ್ಶಿ ರವಿ, ಕುಂದಾಪುರ ಉಪವಿಭಾಗಾಧಿಖಾರಿ ರಾಜು, ಜಿಲ್ಲಾ ನಗರ ಯೋಜನಾಕಾರಿ ಅರುಣಪ್ರಭಾ, ಜಿ.ಪಂ. ಸದಸ್ಯರಾದ ಶಂಕರ ಪೂಜಾರಿ, ಬಾಬು ಶೆಟ್ಟಿ, ಸುರೇಶ ಬಟ್ವಾಡಿ, ಶೋಭಾ ಪುತ್ರನ್, ಬೈಂದೂರು ತಾ.ಪಂ. ಅಧ್ಯಕ್ಷ ಮಹೇಂದ್ರ ಪೂಜಾರಿ, ಉಪಾಧ್ಯಕ್ಷೆ ಮಾಲಿನಿ ಕೆ., ಕುಂದಾಪುರ ತಾ.ಪಂ. ಅಧ್ಯಕ್ಷೆ ಇಂದಿರಾ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ದೀಪಕ್‌ಕುಮಾರ ಶೆಟ್ಟಿ ಇಲಾಖಾಕಾರಿಗಳು, ಜನಪ್ರತಿನಿಗಳು ಉಪಸ್ಥಿತರಿದ್ದರು.

ತಹಶೀಲ್ದಾರ ಬಸಪ್ಪ ಪಿ. ಪೂಜಾರ್ ಸ್ವಾಗತಿಸಿದರು, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮೆಬಲ್ ಡಿಸೋಜಾ ಪ್ರಾಸ್ತಾವಿಕವಾಗಿ ಮಾತನಾಡಿದರು, ಶಿಕ್ಷಕ ಸುಬ್ರಹ್ಮಣ್ಯ ಜಿ. ಉಪ್ಪುಂದ ನಿರೂಪಿಸಿದರು.

Exit mobile version