Kundapra.com ಕುಂದಾಪ್ರ ಡಾಟ್ ಕಾಂ

ಮರವಂತೆ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮರವಂತೆ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆಯ ಐ. ವಸಂತಕುಮಾರಿ ಕಲಾಂಗಣದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸವಿತಾ ಶೆಟ್ಟಿ ಮಾತನಾಡಿ, ಸಮುದಾಯದಲ್ಲಿ ಹೆಣ್ಣು ಮಕ್ಕಳ ಬಗೆಗೆ ಇರುವ ತಾರತಮ್ಯ ಮನೋಭಾವದ ಕಾರಣ ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿದೆ. ಅದರ ಪರಿಣಾಮವಾಗಿ ಲಿಂಗ ಅಸಮತೋಲನ ಉಂಟಾಗುತ್ತಿದೆ. ಇದು ಸಮಾಜದ ಬೆಳವಣಿಗೆಗೆ ಮಾರಕ ಎಂದು ಹೇಳಿದರು.

ಸಮಾಜದಲ್ಲಿ ಹೆಣ್ಣು ಮಕ್ಕಳ ಕಿರುಕುಳ, ಲೈಂಗಿಕ ಶೋಷಣೆ ಹೆಚ್ಚುತ್ತಿದೆ. ಇದರ ವಿರುದ್ಧ ಹೆಣ್ಣು ಮಕ್ಕಳು ಮಾತ್ರವಲ್ಲದೆ ಇಡೀ ಸಮಾಜ ಎಚ್ಚತ್ತುಕೊಂಡು ಪ್ರತಿಭಟಿಸಿ, ತಡೆಗಟ್ಟಬೇಕು ಎಂದು  ಹೇಳಿದರು. ಮಕ್ಕಳ ಮಿತ್ರೆ ಅನಿತಾ ಆರ್.ಕೆ ಹದಿಹರೆಯದ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಿಯಾಜ್ ಅಹಮ್ಮದ್ ಅಧ್ಯಕ್ಷತೆ ವಹಿಸಿದ್ದರು. ಸಿಬ್ಬಂದಿ ಶೇಖರ ಮರವಂತೆ ಸ್ವಾಗತಿಸಿ, ನಿರೂಪಿಸಿದರು. ಶಿಕ್ಷಕ ಸರ್ವೊತ್ತಮ ಭಟ್ ವಂದಿಸಿದರು.

ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕೆ. ವಿಘ್ನೇಶ್ವರ, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸತ್ಯನಾ ಕೊಡೇರಿ, ದೈಹಿಕ ಶಿಕ್ಷಣ ಶಿಕ್ಷಕ ರಾಮನಾಥ್ ಶೆಟ್ಟಿ ಇದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ, ಪ್ರಶಾಂಸಾಪತ್ರ ವಿತರಿಸಲಾಯಿತು

Exit mobile version