Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲೆಯ 74,049 ಮಕ್ಕಳಿಗೆ ಪಲ್ಸ್ ಪೋಲಿಯೋ: ಜಿಲ್ಲಾಧಿಕಾರಿ ಜಿ. ಜಗದೀಶ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಒಟ್ಟು 74,049 ಮಕ್ಕಳಿಗೆ (ಗ್ರಾಮೀಣ ಪ್ರದೇಶ 65326+ ನಗರ ಪ್ರದೇಶ 8723) ಜನವರಿ 31ರಂದು ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 657 ಲಸಿಕಾ ಕೇಂದ್ರಗಳನ್ನು ತೆರೆಯಲಿದ್ದು, (ಗ್ರಾಮೀಣ ಪ್ರದೇಶ 585 ನಗರ ಪ್ರದೇಶ 72) ಅಲ್ಲದೇ 8 ಮೊಬೈಲ್ ಟೀಮ್ ಮತ್ತು 37 ಟ್ರಾನ್ಸಿಟ್ ಬೂತ್‌ಗಳನ್ನು ತೆರೆದು ಮತ್ತು ಜಿಲ್ಲೆಯ ಎಲ್ಲಾ ಟೋಲ್‌ಗೇಟ್‌ಗಳಲ್ಲಿಯೂ ಲಸಿಕಾ ಕೇಂದ್ರಗಳನ್ನು ತೆರೆದು , 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ 2768 ಲಸಿಕಾ ಸ್ವಯಂಸೇವಕರು ಮತ್ತು 133 ಮೇಲ್ವಿಚಾರಕರು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಲಿದ್ದು, . ಆರೋಗ್ಯ, ಪಂಚಾಯತ್ ರಾಜ್, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಂದಾಯ ಇಲಾಖೆ ಮತ್ತು ಇತರ ಇಲಾಖೆ, ರೋಟರಿ ಹಾಗೂ ಇತರ ಸ್ವಯಂಸೇವಾ ಸಂಸ್ಥೆಗಳ ಸಹಕಾರ, ಜಿಲ್ಲಾಡಳಿತದ ಮಾರ್ಗದರ್ಶನದೊಂದಿಗೆ ಲಸಿಕಾ ಕಾರ್ಯಕ್ರಮ ನಡೆಯಲಿದೆ.

ಸಾರ್ವಜನಿಕರು, ವಲಸೆ ಕಾರ್ಮಿಕರು, ಕೊಳಚೆ ನಿವಾಸಿಗಳು ತಮ್ಮ 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಿಸಿ ಸಹಕರಿಸುವುದು. ಗ್ರಾಮಾಂತರ ಪ್ರದೇಶದಲ್ಲಿ ದಿನಾಂಕ 01.02.21 ಮತ್ತು 02.02.21 ಹಾಗೂ ನಗರ ಪ್ರದೇಶದಲ್ಲಿ 01.02.21ರಿಂದ 03.02.21ರ ತನಕ , ಸ್ವಯಂಸೇವಕರು ಮನೆ ಮನೆ ಭೇಟಿ ನೀಡಿ 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೋ ಹನಿ ಹಾಕಿಸಿದ ಬಗ್ಗೆ ಖಚಿತಪಡಿಸಿಕೊಳ್ಳಲಿದ್ದಾರೆ.

Exit mobile version