Kundapra.com ಕುಂದಾಪ್ರ ಡಾಟ್ ಕಾಂ

ಜು.26ರಿಂದ ಕೃಷಿ ಅಭಿಯಾನ ಕಾರ್ಯಕ್ರಮ: ಜಿಲ್ಲಾಧಿಕಾರಿ ಜಿ. ಜಗದೀಶ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯಾದ್ಯಂತ ಜುಲೈ 26ರಿಂದ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಿ, ಈ ಕಾರ್ಯಕ್ರಮದಲ್ಲಿ ರೈತರಿಗೆ ಕೃಷಿ ಮತ್ತು ತೋಟಗಾರಿಕಾ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.

ಅವರು ನಗರದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ 2021-22 ನೇ ಸಾಲಿನ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಗ್ರ ಕೃಷಿ ಅಭಿಯಾನವನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಜುಲೈ 26 ರಿಂದ ಆಗಸ್ಟ್ 7 ರವರೆಗೆ ಏರ್ಪಡಿಸಿ, ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹಾಗೂ ಕೃಷಿ ವಿಜ್ಞಾನಿಗಳ ತಂಡ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ , ಸಮಗ್ರ ಕೃಷಿ ಅಭಿವೃಧ್ದಿ ಕುರಿತು ರೈತರಿಗೆ ವಿವರವಾದ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕೃಷಿಕರನ್ನು ಸ್ವಾವಲಂಬಿಗಳಾಗಿ,ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸದೃಢಗೊಳಿಸಲು ಪ್ರಸುತ್ತ ಸಾಲಿನಲ್ಲಿ , ಕೇಂದ್ರ ಸರಕಾರವು ಕೃಷಿ ಯೋಜನೆಗಳಿಗೆ ಹೆಚ್ಚು ಮಹತ್ವ ನೀಡಿದ್ದು , ರೈತರು ಕೃಷಿ ಚಟುವಟಿಕೆಗಳಿಗೆ ಸಾಲ ಪಡೆಯಲು ಬಾಂಕ್ ಗೆ ಭೇಟಿ ನೀಡಿದಾಗ, ಬ್ಯಾಂಕ್ ನಲ್ಲಿರುವ ಕೃಷಿ ಯೋಜನೆಗಳ ಬಗ್ಗೆ ಬ್ಯಾಂಕ್ ನ ಮ್ಯಾನೇಜರ್ಗಳು , ರೈತರಿಗೆ ಸಮರ್ಪಕವಾದ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

2020 – 21 ನೆ ಸಾಲಿನಲ್ಲಿ ಬೆಳೆ ವಿಮಾ ಯೋಜನೆಯಡಿಯಲ್ಲಿ ಈ ವರೆಗೆ 3085 ರೈತರಿಗೆ ಕೃಷಿ ಚಟುವಟಿಕೆಗಾಗಿ ವಿಮೆ ಹಾಗೂ ಸಾಲ ಸೌಲಭ್ಯ ಒದಗಿಸಿದ್ದು, ಬೆಳೆ ವಿಮಾ ಯೋಜನೆಯಲ್ಲಿ ಬಾಕಿ ಉಳಿದ ಪ್ರಕರಣಗಳನ್ನು ಒಂದು ತಿಂಗಳ ಒಳಗೆ ವಿಮೆ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದರು.

ಕೃಷಿ ಮೂಲಭೂತ ಸೌಕರ್ಯ ನಿಧಿಯಲ್ಲಿ ಸುಧಾರಿತ ಮಾರುಕಟ್ಟೆ ಸೌಕರ್ಯವನ್ನು ಸೃಷ್ಟಿಸಿ ರೈತರಿಗೆ ನೇರ ಮಾರಾಟ ಮಾಡಲು ಅವಕಾಶ ಕಲ್ಪಿಸಬೇಕು ಹಾಗೂ ಫಲಾನುಭವಿಯ ಹಣಕಾಸು ಸಂಸ್ಥೆಗಳಿಂದ ಪಡೆಯುವ ಸಾಲದ ಮೇಲಿನ ಬಡ್ಡಿಗೆ ನಿಗಧಿತ ಸಹಾಯಧನವನ್ನು ನೀಡಬೇಕು ಈü ಯೋಜನೆಯ ಕುರಿತು ಪ್ರಚಾರ ಕಾರ್ಯಕ್ರಮಗಳನ್ನು ಇಲಾಖೆ ವತಿಯಿಂದ ಆಯೋಜಿಸಬೇಕು , ಸಮಗ್ರ ಕೃಷಿ ಮಾಹಿತಿ ಯೋಜನೆಯಡಿಯಲ್ಲಿ ರೈತರಿಗೆ ಸಕಾಲದಲ್ಲಿ ಕೃಷಿ ಪರಿಕರಗಳ ಸೌಲಭ್ಯವನ್ನು ಒದಗಿಸುವುದರ ಜೊತೆಗೆ ಅಗತ್ಯ್ಲ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಲಕ್ಷ್ಮಣ್, ಡಾ.ಧನಂಜಯ, ಡಿ.ಎಚ್.ಓ ಡಾ.ನಾಗಭೂಷಣ್ ಉಡುಪ ಹಾಗೂ ಕೃಷಿ ಇಲಾಖೆಯ ವಿವಿಧ ಅಧಿಕಾರಿಗಳು, ರೈತ ಪ್ರತಿನಿಧಿಗಳು, ಸಮಿತಿ ಸಂಘ ಸಂಸ್ಥೆಯ ಪ್ರತಿನಿಧಿಗಳು , ಮತ್ತಿತರರು ಉಪಸ್ಥಿತರಿದ್ದರು.

Exit mobile version