Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಮಾಸ್ಕ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಇಂದಿನ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕಾಗಿದೆ. ಸರಕಾರಿ ಶಾಲೆಗಳು ಮೂಲಭೂತ ಸೌಲಭ್ಯಗಳನ್ನು ಹೊಂದಿದ್ದು, ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ಸರಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಮತ್ತು ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಸುಮಾರು 40 ಸರಕಾರಿ ಶಾಲೆಗಳ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ, ವಿದ್ಯಾರ್ಥಿವೇತನ ವಿತರಣೆ ಮತ್ತಿತರ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಕರೋನಾದ ಈ ಕಾಲಘಟ್ಟದಲ್ಲಿ ಶಿಕ್ಷಕರ ಮೇಲಿನ ಜವಾಬ್ದಾರಿ ಹೆಚ್ಚಿದ್ದು, ಭೌತಿಕ ತರಗತಿಗಳು ಆರಂಭವಾದ ಬಳಿಕ ಮಕ್ಕಳ ಸುರಕ್ಷತೆ ಕಡೆ ಹೆಚ್ಚಿನ ಗಮನ ನೀಡಬೇಕು ಎಂದು ಕೋಟೇಶ್ವರದ ಗೀತಾ ಎಚ್.ಎಸ್.ಎನ್.ಫೌಂಡೇಶನ್ ಅಧ್ಯಕ್ಷ ಶಂಕರ ಐತಾಳ್ ಹೇಳಿದರು.

ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ಉಚಿತ ಮಾಸ್ಕ್ ವಿತರಣೆ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಗೀತಾ ಎಚ್.ಎಸ್.ಎನ್.ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾದ ನೋಟ್ ಪುಸ್ತಕಗಳನ್ನು ಅವರು ಹಸ್ತಾಂತರಿಸಿದರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ರಿಲಯನ್ಸ್ ಫೌಂಡೇಶನ್ ವತಿಯಿಂದ ಮೂಡುಗಿಳಿಯಾರು ಜನಸೇವಾ ಟ್ರಸ್ಟ್ ಕೊಡುಗೆಯಾಗಿ ನೀಡಿದ ಮಾಸ್ಕ್‌ಗಳನ್ನು ಪತ್ರಕರ್ತ ವಸಂತ ಗಿಳಿಯಾರು ಹಸ್ತಾಂತರಿಸಿ ಶುಭ ಹಾರೈಸಿದರು. ಗಂಗೊಳ್ಳಿ ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿ ಸೌಪರ್ಣಿಕಾ, ಜೈ ಭಾರ್ಗವ ಸಂಘಟನೆಯ ಅಜಿತ್ ಕುಮಾರ್ ಶೆಟ್ಟಿ ಕೀರಾಡಿ, ಪತ್ರಕರ್ತ ಬಿ.ರಾಘವೇಂದ್ರ ಪೈ ಶುಭಾಂಶಸನೆಗೈದರು. ಎಸ್‌ಡಿಎಂಸಿ ಸದಸ್ಯರು, ಸಹಶಿಕ್ಷಕರು, ಪೋಷಕರು ಮತ್ತಿತರರು ಉಪಸ್ಥಿತರಿದ್ದರು.

ಶಾಲೆಯ ಮುಖ್ಯಶಿಕ್ಷಕಿ ಸುಮತಿ ಎಂ. ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಉಮೇಶ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕ ಶಶಿಶಂಕರ ವಂದಿಸಿದರು.

Exit mobile version