ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮುಖ್ಯಮಂತ್ರಿ ಬಸರಾಜ್ ಎಸ್. ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಅಭಿವೃದ್ಧಿ ಕುರಿತಂತೆ ಬೆಂಗಳೂರಿನಲ್ಲಿ ಸಭೆ ನಡೆಯಿತು.
ಈ ಸಭೆಯಲ್ಲಿ ಶಿವಮೊಗ್ಗ ಸಂಸದರಾದ ಬಿ.ವೈ. ರಾಘವೇಂದ್ರ ಅವರು, ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ಅಗತ್ಯವಿರುವ ಅಂಶಗಳ ಬಗ್ಗೆ ವಿವರವಾಗಿ ಸಭೆಗೆ ಪ್ರಸ್ತಾಪಿಸಿದರು.
ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸೋಮೇಶ್ವರ ಬೀಚ್ ಮತ್ತು ಮರವಂತೆ ಬೀಚ್ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಡಿ.ಪಿ.ಆರ್. ಅಂತಿಮಗೊಳಿಸಿ ಕಾಮಗಾರಿ ಕೈಗೆತ್ತಿಕೊಳ್ಳಲು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು.
ಪ್ರವಾಸೋದ್ಯಮ ಕಾಮಗಾರಿಗಳು ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಸಿ.ಆರ್. ಝಡ್ ಅಧಿಸೂಚನೆಯನ್ನು ನವ್ಹೆಂಬರ್-2021 ಅಂತ್ಯದೊಳಗೆ ಅಂತಿಮಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು.
ಕೊಡಚಾದ್ರಿ-ಕೊಲ್ಲೂರು ರೋಪ್-ವೇ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಸರಕಾರಿ-ಖಾಸಗಿ ಸಹಭಾಗಿತ್ವದಲ್ಲಿ (ಪಿ.ಪಿ.ಪಿ. ಮಾದರಿಯಡಿ) ಅನುಷ್ಠಾನಗೊಳಿಸಲು ಶೀಘ್ರ ಟೆಂಡರ್ ಕರೆಯಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸೌಕೂರು ಏತ ನೀರಾವರಿ ಯೋಜನೆಯ ಶೀಘ್ರ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡಲು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.
ಸಭೆಯಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಪ್ರಸಾದ್, ಮುಖ್ಯಮಂತ್ರಿಗಳ ಕಾರ್ಯದರ್ಶಿಯವರಾದ ವಿ. ಪೊನ್ನುರಾಜ್, ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ನಾಗಾಂಬಿಕಾ ದೇವಿ, ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳು, ಅರಣ್ಯ ಇಲಾಖೆಯ ಕಾರ್ಯದರ್ಶಿಗಳು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಇತರೆ ರಾಜ್ಯಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.