Kundapra.com ಕುಂದಾಪ್ರ ಡಾಟ್ ಕಾಂ

ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ ಹಾಗೂ ಮಾರಿಕಾಂಬಾ ಮಹಿಳಾ ಸಂಘ ಕೊಡಪಾಡಿ ಗುಜ್ಜಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ಆಯೋಜಿಸಿದ್ದ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಭಾನುವಾರ ನಡೆಯಿತು.

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಜಿಪಂ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ ಮಾತನಾಡಿ, ಮಹಿಳೆಯರ ಸಬಲೀಕರಣ ಆಗಬೇಕು ಪ್ರತಿಯೊಬ್ಬ ಮಹಿಳೆ ಸ್ವಂತ ದುಡಿಮೆಯಿಂದ ಬದುಕು ಕಟ್ಟಿಕೊಳ್ಳಬೇಕು. ಮಹಿಳೆ ಕೇವಲ ನಾಲ್ಕು ಗೋಡೆಗಳ ನಡುವೆ ಇರದೇ ತನ್ನದೇ ಪರಿಶ್ರಮದಿಂದ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಮುಂದೆಬರಬೇಕು ಹಾಗೂ ಇಲ್ಲಿ ತರಬೇತಿ ಪಡೆದ ಎಲ್ಲಾ ಮಹಿಳೆಯರು ಒಳ್ಳೆಯ ಅಭಿವೃದ್ದಿಯನ್ನು ಹೊಂದಲಿ ಎಂದು ಹಾರೈಸಿದರು.

ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಎನ್. ಶುಭಾಶಂಸನೆಗೈದರು. ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ. ಪೂಜಾರಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಶೋಭಾ ಜಿ. ಪುತ್ರನ್, ಶ್ರೀಲತಾ ಸುರೇಶ್, ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘ ಉಡುಪಿ ಜಿಲ್ಲಾಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್, ತರಬೇತುದಾರರಾದ ಶಾಂತಿ ಖಾರ್ವಿ ಹಾಗೂ ಸುಮಿತ್ರ ಉಪಸ್ಥಿತರಿದ್ದರು.

ರೇಖಾ ಖಾರ್ವಿ ಸ್ವಾಗತಿಸಿದರು. ಉಡುಪಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ವಿಲ್ಫ್ರೆಡ್ ಡಿಸೋಜಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹನಾ ಕೆ. ಕಾರ್ಯಕ್ರಮ ನಿರ್ವಹಿಸಿದರು. ಸಂಗೀತಾ ವಂದಿಸಿದರು.

Exit mobile version