Kundapra.com ಕುಂದಾಪ್ರ ಡಾಟ್ ಕಾಂ

ತಳಮಟ್ಟದಲ್ಲಿ ಸಂಘಟನೆ ಬಲಗೊಂಡರೆ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ: ಎಂಎಲ್‌ಸಿ ಮಂಜುನಾಥ್ ಭಂಡಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಎ.23:
ತಳಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಬಲಗೊಳ್ಳುವ ಅಗತ್ಯವಿದ್ದು, ಪಕ್ಷದ ಕಾರ್ಯಕರ್ತರು ಸಕ್ರೀಯವಾಗಿ ತೊಡಗಿಸಿಕೊಂಡಾಗ ಮಾತ್ರ ಎಲ್ಲಾ ಚುನಾವಣೆಯನ್ನೂ ಸಂಘಟನಾತ್ಮಕವಾಗಿ ಎದುರಿಸಿ ನಿರೀಕ್ಷಿತ ಫಲಿತಾಂಶ ಪಡೆಯಲು ಸಾಧ್ಯವಿದೆ ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದರು.

ಅವರು ಹೆಮ್ಮಾಡಿಯ ಮತ್ಸ್ಯಜ್ಯೋತಿ ಸಭಾಂಗಣದಲ್ಲಿ ಶನಿವಾರ ನಡೆದ ಗಂಗೊಳ್ಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕ್ಷೇತ್ರವಾರು ಪ್ರಮುಖರ ಸಭೆಯನ್ನುದ್ದೇಶಿಸಿ ಮಾತನಾಡಿ ತನ್ನನ್ನು ಕಳೆದ ಚುನಾವಣೆಯಲ್ಲಿ ಗೆಲ್ಲಿಸಲು ಸಹಕರಿಸಿದ ಗ್ರಾ.ಪಂ. ಸದಸ್ಯರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಪರಿಷತ್ ಸದಸ್ಯರಿಗೆ ಸಿಗುವ ಅನುದಾನವನ್ನು ಅಗತ್ಯವಿರುವ ಗ್ರಾ.ಪಂ.ಗಳಿಗೆ ಅದ್ಯತೆ ನೆಲೆಯಲ್ಲಿ ಹಂಚಿಕೆ ಮಾಡಲಾಗುವುದು. ಎಲ್ಲೆಲ್ಲ ಅಗತ್ಯವಿದೆ ಅನ್ನುವುದನ್ನು ತಿಳಿಸುವ ಕಾರ್ಯವನ್ನು ಸ್ಥಳೀಯ ಜನಪ್ರತಿನಿಧಿಗಳು ಮಾಡಬೇಕಿದೆ ಎಂದರು.

ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಪಕ್ಷ ಭಾವನಾತ್ಮಕವಾಗಿ ಜನರನ್ನು ಮರುಳು ಮಾಡುತ್ತದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದರಿಂದ ವಿಚಲಿತರಾಗದೇ, ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಲ್ಲೂರಿನಿಂದ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಕಾರ್ಯ ಆರಂಭಗೊಳ್ಳಲಿದೆ ಎಂದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷೆ ರೋಶನಿ ಒಲಿವೆರಾ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಪ್ರದೀಪ್ ಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು. ಪಕ್ಷದ ಮುಖಂಡರಾದ ಪ್ರಸನ್ನ ಕುಮಾರ್ ಶೆಟ್ಟಿ ಕೆರಾಡಿ ಸ್ವಾಗತಿಸಿ, ಶರತ್ ಕುಮಾರ್ ಶೆಟ್ಟಿ ವಂದಿಸಿದರು.

ಸಭೆಯಲ್ಲಿ ಗಂಗೊಳ್ಳಿ ಜಿ.ಪಂ. ವ್ಯಾಪ್ತಿಯ ಗುಜ್ಜಾಡಿ, ಹೆಮ್ಮಾಡಿ, ಕಟ್ಬೆಲ್ತೂರು, ಹೊಸಾಡು, ಗಂಗೊಳ್ಳಿ ಹಾಗೂ ತ್ರಾಸಿ ಗ್ರಾ.ಪಂ. ಸದಸ್ಯರು, ನಾಯಕರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Exit mobile version