Kundapra.com ಕುಂದಾಪ್ರ ಡಾಟ್ ಕಾಂ

ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ವಿದ್ಯಾನಿಧಿ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ವಿವಿಧ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದಾರ್ಥಿಗಳಿಗೆ ವಿದ್ಯಾನಿಧಿ ಹಾಗೂ ನೋಟ್‌ಬುಕ್ ವಿತರಣಾ ಕಾರ್ಯಕ್ರಮ ಸೋಮವಾರ ಜರುಗಿತು.

ಉಡುಪಿ ಜಿಲ್ಲಾ ಶ್ರೀಮದ್ಭಗವದ್ದೀತಾ ಜಯಂತಿ ಆಚರಣಾ ಸಮಿತಿ ಪ್ರಧಾನ ಸಂಚಾಲಕ ಬಿ. ರಾಮಕೃಷ್ಣ ಶೇರುಗಾರ್ ವಿದ್ಯಾನಿಧಿ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿ ಕೆಲವು ವರ್ಷಗಳ ಹಿಂದೆ ಶಿಕ್ಷಣ ಪಡೆಯಲು ಹಿಂದೇಟು ಹಾಕುತ್ತಿದ್ದ ಗ್ರಾಮದಲ್ಲಿ ಶ್ರೀ ರಾಮಕೃಷ್ಣ ಕುಟೀರದ ಮೂಲಕ ಹಲವಾರು ವಿದ್ಯಾರ್ಥಿಗಳು ಇಂದು ಉನ್ನತ ವ್ಯಾಸಂಗವನ್ನೂ ಪೂರೈಸಿರುವುದು ಗಮನಾರ್ಹ ಸಾಧನೆ. ಸ್ವಾಮಿ ಸತ್ಯಸ್ವರೂಪಾನಂದರ ಇಚ್ಛಾಶಕ್ತಿಯಿಂದ ಇದು ಸಾಧ್ಯವಾಗಿದೆ. ವಿದ್ಯಾರ್ಥಿ ವೇತನ ಪಡೆದು ಉತ್ತಮ ಶಿಕ್ಷಣ ಉದ್ಯೋಗ ಪಡೆದುಕೊಳ್ಳುವುದರ ಜತೆಗೆ ಇತರರಿಗೂ ಸಹಕಾರ ಮಾಡುವ ಗುಣ ಬೆಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ ಕಳೆದ 21 ವರ್ಷಗಳಿಂದಲೂ ಶ್ರೀ ಸಿದ್ಧಿವಿನಾಯಕ ಸಾಂಸ್ಕೃತಿಕ ಕೇಂದ್ರದ ಮೂಲಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಲಿಕೆಗೆ ಪ್ರೋತ್ಸಾಹ ನೀಡುತ್ತಾ ಬರಲಾಗಿದೆ. ಕಳೆದೊಂದು ವರ್ಷದಿಂದ ವಿದ್ಯಾರ್ಥಿಗಳಿಗೆ ಒಂದೊಂದು ಸೆಟ್ ನೋಟ್‌ಪುಸ್ತಕಗಳನ್ನು ವಿತರಿಸಲಾಗಿದ್ದು, ಈ ವರ್ಷವೂ ವಿತರಿಸಲಾಗುತ್ತಿದೆ. ಕುಟೀರದ ಮೂಲಕ ಹಲವು ಸಾಮಾಜಿಕ, ಧಾರ್ಮಿಕ ಕಾರ್ಯಗಳನ್ನು ಮಾಡಲಾಗಿತ್ತು. ದಾನಿಗಳ ನೆರವಿನಿಂದ ಸೇವಾ ಕಾರ್ಯದಲ್ಲಿ ತೊಡಗಿಕೊಳ್ಳಲು ಸಾಧ್ಯವಾಗಿದೆ ಎಂದರು.

ಈ ಸಂದರ್ಭ ಯಶೋದಾ ಎಂ. ಅಡಿಗ ಕಾರ್ಯಕ್ರಮ ನಿರೂಪಿಸಿದರು.

Exit mobile version