ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಮೇ 21: ವಿದ್ಯಾರ್ಥಿಗಳು ತಮ್ಮ ಕನಸಿನ ಗುರಿಯನ್ನು ಸಾಧಿಸಲು ಕಠಿಣ ಶ್ರಮ ಮತ್ತು ನಿರಂತರವಾಗಿ ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿ ವಿಶೇಷ ಸಾಧನೆ ಮಾಡಿದ ಜಿಲ್ಲೆಯ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಿ ಮಾತನಾಡಿದರು.
ಎಸ್.ಎಸ್.ಎಲ್.ಸಿ ನಂತರ ವಿದ್ಯಾರ್ಥಿಗಳು ತಾವು ನಿಗಧಿಪಡಿಸಿಕೊಂಡಿರುವ ನಿಗಧಿತ ಗುರಿಯನ್ನು, ಯಾವುದೇ ಸಂದರ್ಭದಲ್ಲೂ ಕೈಬಿಡದೆ ಅದರ ಸಾಧನೆಗೆ ಪ್ರಯತ್ನಿಸಬೇಕು. ನಿರಂತರವಾಗಿ ಅಧ್ಯಯನ ಹಾಗೂ ಗ್ರಂಥಾಲಯಗಳಿಗೆ ಭೇಟಿ ನೀಡಿ, ಸಾಧನೆಗೆ ಅಗತ್ಯವಿರುವ ಪುಸ್ತಕಗಳನ್ನು ಅಧ್ಯಯನ ಮಾಡಬೇಕು. ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಸುಸಜ್ಜಿತ ಮತ್ತು ಡಿಜಿಟಲ್ ಗ್ರಂಥಾಲಯ ಸೌಲಭ್ಯವಿದ್ದು, ಅದರ ಸಂಪೂರ್ಣ ಪ್ರಯೋಜನ ಪಡೆಯುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಡಿಡಿಪಿಐ ಗೋವಿಂದ ಮಡಿವಾಳ, ಶಿಕ್ಷಣಾಧಿಕಾರಿ ಜಾಹ್ನವಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಅಶೋಕ್ ಕಾಮತ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪುನೀತ್ ನಾಯಕ್, ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಗಾಯತ್ರಿ, ಕಾಳಾವರ ಸರಕಾರಿ ಪ್ರೌಢಶಾಲೆಯ ನಿಶಾ ಹಾಗೂ ಬೈಂದೂರು ಕಿರಿಮಂಜೇಶ್ವರ ಸಂದೀಪನ ಆಂಗ್ಲಮಾಧ್ಯಮ ಶಾಲೆಯ ಅಕ್ಷತಾ ಅವರನ್ನು ಸನ್ಮಾನಿಸಲಾಯಿತು.