Kundapra.com ಕುಂದಾಪ್ರ ಡಾಟ್ ಕಾಂ

ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ: ಡಾ. ಅಮಿತಾ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಡೆಂಗ್ಯೂ ಜ್ವರ ವೈರಸ್‌ನಿಂದ ಉಂಟಾಗುವ ಖಾಯಿಲೆಯಾಗಿದ್ದು, ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸೊಳ್ಳೆಗಳ ನಿಯಂತ್ರಣ ಕ್ರಮದಿಂದದಿಂದ ಡೆಂಗಿ ಜ್ವರ, ಮಲೇರಿಯಾ, ಫೈಲೇರಿಯಾ, ಚಿಕನ್‌ಗುನ್ಯ, ಮೆದುಳು ಜ್ವರ ಮತ್ತು ಕಾಲರಾ ರೋಗವನ್ನು ನಿಯಂತ್ರಿಸಬಹುದಾಗಿದೆ ಎಂದು ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ ಹೇಳಿದರು.

ಡೆಂಗ್ಯೂ ಜ್ವರ ನಿಯಂತ್ರಣದ ಬಗ್ಗೆ ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಂದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಆರೋಗ್ಯ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ಮನೆಯ ಪರಿಸರವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು. ನಮ್ಮ ಮನೆಯ ಸುತ್ತಮುತ್ತ ಎಲ್ಲಿಯೂ ನೀರು ನಿಲ್ಲದಂತೆ ಡೆಂಗ್ಯೂ ಜ್ವರ ನಿಯಂತ್ರಣ ಎಲ್ಲರ ಜವಾಬ್ದಾರಿಯಾಗಿದ್ದು ಸೊಳ್ಳೆಗಳು ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಡ್ರಮ್, ಬ್ಯಾರೆಲ್, ಮಣ್ಣಿನ ಮಡಿಕೆ, ಉಪಯೋಗಿಸದ ಒರಳುಕಲ್ಲು ಮುಂತಾದ ಕಡೆ ಶೇಖರವಾಗುವ ನೀರಿನಲ್ಲಿ ಉತ್ಪತ್ತಿಯಾಗುವುದರಿಂದ ಈ ರೀತಿ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದ ಅವರು, ಇತ್ತೀಚಿನ ದಿನಗಳಲ್ಲಿ ಮಾರಕವಾಗಿ ಕಾಡುತ್ತಿರುವ ಡೆಂಗಿ ಜ್ವರ ನಿಯಂತ್ರಣಕ್ಕೆ ಇಲಾಖೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸ್ಥಳೀಯಾಡಳಿತ ಆರೋಗ್ಯ ಇಲಾಖೆ ಜೊತೆ ಕೈಜೋಡಿಸಿ ಸಮಾರೋಪಾದಿಯಲ್ಲಿ ಡೆಂಗಿ ಜ್ವರ ನಿಯಂತ್ರಣಕ್ಕೆ ಮುಂದಾಗಬೇಕು ಎಂದರು.

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ದ್ವಿತೀಯ ದರ್ಜೆ ಸಹಾಯಕ ಶೇಖರ ಜಿ., ಗ್ರಾಪಂ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮೊದಲಾದವರು ಉಪಸ್ಥಿತರಿದ್ದರು. ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಸ್ವಾಗತಿಸಿ ವಂದಿಸಿದರು.

Exit mobile version