ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ರೂಪಿಸಿದ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರು ಪೂರೈಸಲು ಸರಕಾರ ಉದ್ದೇಶಿಸಿದೆ. ಮುಂದಿನ ವರ್ಷಗಳಲ್ಲಿ ಸರಕಾರ ಕುಡಿಯುವ ನೀರಿನ ಯೋಜನೆಗಳಿಗೆ ಅನುದಾನ ಕಡಿತಗೊಳಿಸುವ ಸಾಧ್ಯತೆ ಇರುವುದರಿಂದ ಮತ್ತು ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಗ್ರಾಮ ಪಂಚಾಯತ್‌ಗಳಿಗೆ ಕುಡಿಯುವ ನೀರು ಪೂರೈಕೆ ಸವಾಲಾಗಲಿದೆ. ಹೀಗಾಗಿ ಈ ಸಮಸ್ಯೆಯಿಂದ ಪಾರಾಗಲು ಪ್ರತಿಯೊಬ್ಬರು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಸಂಪರ್ಕವನ್ನು ಪಡೆದುಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಪಂಚಾಯತ್ ಬೈಂದೂರು ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಾಜ್‌ಕುಮಾರ್ ಹೇಳಿದರು.
ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಬುಧವಾರ ನಡೆದ ನೀರು ಮತ್ತು ನೈರ್ಮಲ್ಯ ಸಮಿತಿ ವಿಶೇಷ ಗ್ರಾಮ ಸಭೆಯಲ್ಲಿ ಅವರು ಮಾಹಿತಿ ನೀಡಿ ಮಾತನಾಡಿದರು.
ಜಲಜೀವನ ಮಿಷನ್ ಯೋಜನೆಯಲ್ಲಿ ಕೇಂದ್ರ ಸರಕಾರ ಶೇ. 42.5, ರಾಜ್ಯ ಸರಕಾರ ಶೇ. ೪೨.೫ ಮತ್ತು ಸ್ಥಳೀಯ ಗ್ರಾಮ ಪಂಚಾಯತ್‌ನ ೧೫ನೇ ಹಣಕಾಸು ಯೋಜನೆಯಡಿ ಶೇ.೫ ಅನುದಾನವನ್ನು ನೀಡುತ್ತಿದ್ದು, ಶೇ.10ರಷ್ಟನ್ನು ಸ್ಥಳೀಯರ ಸಹಭಾಗಿತ್ವದಲ್ಲಿ ಸಂಗ್ರಹಿಸಬೇಕಿದೆ. ಮುಂದಿನ ದಿನಗಳಲ್ಲಿ ನೀರಿನ ಅಭಾವ ಕಾಡಲಿರುವುದರಿಂದ ಪ್ರತಿಯೊಬ್ಬರೂ ಈ ಯೋಜನೆಯಡಿ ನೀರಿನ ಸಂಪರ್ಕ ಪಡೆದುಕೊಳ್ಳಬೇಕಿದೆ. ಗಂಗೊಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಬೇಡಿಕೆ ಕಡಿಮೆ ಇರುವುದರಿಂದ ಈ ಯೋಜನೆ ಕೈತಪ್ಪುವ ಸಾಧ್ಯತೆ ಇದೆ. ಹೀಗಾಗಿ ಗ್ರಾಪಂ ಸದಸ್ಯರು, ವಿವಿಧ ಸಂಘ ಸಂಸ್ಥೆಗಳು ಈ ಯೋಜನೆಯ ಉದ್ದೇಶವನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು, ಕುಡಿಯುವ ನೀರಿನ ಸಂಪರ್ಕ ಪಡೆದುಕೊಳ್ಳುವಂತೆ ಮತ್ತು ಯಾವುದೇ ಕಾರಣಕ್ಕೂ ಈ ಯೋಜನೆ ಕೈತಪ್ಪದಂತೆ ನೋಡಿಕೊಳ್ಳಬೇಕಿದೆ ಎಂದರು.
ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್‌ನ ದಿವಾಕರ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನದ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗ್ರಾಮ ಲೆಕ್ಕಿಗ ಮಾಧವ ಕೊಠಾರಿ, ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ವಿನಯ್, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಗ್ರಾಪಂ ದ್ವಿತೀಯ ದರ್ಜೆ ಸಹಾಯಕ ಶೇಖರ್ ಜಿ. ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.