ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಸ್ಕೂಲ್ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮತ್ತು ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಸಾಧನೆಗೈಯುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಚಾಪನ್ನು ಮೂಡಿಸುತ್ತಿದ್ದು, ಸಂಸ್ಥೆಯು ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸುತ್ತದೆ ಎಂದು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೇಶ್ ಶೆಟ್ಟಿ ಹೇಳಿದರು.
ಅವರು ಗುರುವಾರ ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಚದುರಂಗ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳಾದ ಮಾನಸ ಪ್ರಥಮ ಸ್ಥಾನಿಯಾಗಿ ಹಾಗೂ ನಿಹಾಲ್ ಎನ್ ಶೆಟ್ಟಿ ತೃತೀಯ ಸ್ಥಾನಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಉಡುಪಿ ಜಿಲ್ಲೆಯಿಂದ ರಾಜ್ಯ ಮಟ್ಟಕ್ಕೆ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿರುವ ಏಕೈಕ ಕಾಲೇಜು ಎಂಬ ಹೆಗ್ಗಳಿಕೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನದ್ದಾಗಿದೆ ಎಂದರು.
ಉಡುಪಿ ಜಿಲ್ಲಾ ಮಟ್ಟದ ಶಿಕ್ಷಣ ಇಲಾಖೆ ಆಯೋಜಿಸಿದ ಚದುರಂಗ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪ್ರೌಢ ಶಾಲಾ ವಿದ್ಯಾರ್ಥಿಗಳಾದ ತತ್ವ ಶೆಟ್ಟಿ ಮತ್ತು ಪ್ರಕೃತಿ ಪಿ ಶೆಟ್ಟಿ ಇವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಚದುರಂಗ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಸಮೂಹ ಸಂಸ್ಥೆಯ ನಾಲ್ಕು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದರ ಮೂಲಕ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಓಪನ್ 3ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವಿಘ್ನೇಶ್ ನಾಯಕ ಕುಮಟೆ ವಿಭಾಗದಲ್ಲಿ ಚಿನ್ನದ ಪದಕ, ಕಟಾ ವಿಭಾಗದಲ್ಲಿ ಚಿನ್ನದ ಪದಕ, ಮೊಹಮ್ಮದ್ ಅನೀಸ್ ಕುಮಟೆ ವಿಭಾಗದಲ್ಲಿ ಬೆಳ್ಳಿ ಪದಕ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದರೆ, ಆಯುಷ್ ಪುತ್ರನ್ ಇವರು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ಕುಮಟೆ ವಿಭಾಗದಲ್ಲಿ ಕಂಚಿನ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ ಎಂದರು.
ಪ್ರತಿಭಾವಂತರಿಗೆ ಉಚಿತ ಶಿಕ್ಷಣ:
ಕಲೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಮೂಲಕ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, ಪ್ರಸ್ತುತ ಸಾಲಿನಲ್ಲಿ 50ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಯೋಜನೆಯಡಿ ಕಲಿಯುತ್ತಿದ್ದಾರೆ. ಪ್ರತಿಭಾವಂತರಿಗೆ ಸಂಸ್ಥೆಯಲ್ಲಿ ಕಲಿಕೆಗೆ ಉತ್ತಮ ಅವಕಾಶವಿದೆ ಎಂದರು.
ವಿದ್ಯಾರ್ಥಿಗಳನ್ನು ಕ್ರೀಡಾ ಕ್ಷೇತ್ರದಲ್ಲಿ ಹುರಿದುಂಬಿಸುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಪಿಯುಸಿ ವಿಭಾಗದ ವಾಲಿಬಾಲ್ ಪಂದ್ಯಾಟವನ್ನು ಆಯೋಜಿಸುತ್ತಿದ್ದೇವೆ. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಅವರ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆಗಳನ್ನು ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಕೋಶಾಧಿಕಾರಿಗಳಾದ ಭರತ್ ಶೆಟ್ಟಿ ಮಾತನಾಡಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳಣಿಗೆಗೆ ಪೂರಕವಾದ ವಾತಾವರಣವಿದ್ದು, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಸಮಾನ ಅವಕಾಶ ನೀಡಲಾಗುತ್ತಿದೆ. ಕಲೆ, ಕ್ರೀಡಾ ಕ್ಷೇತ್ರದ ಸಾಧಕರೇ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಪ್ರತಾಪಚಂದ್ರ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಸತೀಶ್, ಜಯಲತಾ, ಕನ್ನಡ ಉಪನ್ಯಾಸಕರಾದ ನಾಗರಾಜ ಶೆಟ್ಟಿ ಇದ್ದರು.