ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಡುಪಿ ಜಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಅನುಪಮ ಸೇವೆ ನೀಡಿದ ರಾಜಕೀಯ ಪರಿಣಿತರ ಆಡಳಿತ ವ್ಯವಸ್ಥೆ, ನ್ಯಾಯಾಂಗ ತಜ್ಞರನ್ನು ಸ್ಮರಿಸುವುದು, ಅವರು ನೀಡಿದ ಕೊಡುಗೆಗಳನ್ನು ಮುಂದಿನ ಪೀಳಿಗೆಗೆ ಆದರ್ಶವಗುವಂತೆ ನೆನಪಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಮುಂದಿನ ದಿನಗಳಲ್ಲಿ ಯಾವ ರೀತಿ ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಬೇಕೆಂದು ಸಂಕಲ್ಪ ಕೈಗೊಳ್ಳಲು ಇದು ಸಕಾಲ ಎಂದು ಇಂದನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.

ನಾಗೂರು ಒಡೆಯರ ಮಠಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಬೈಂದೂರು ತಾಲೂಕು ಆಡಳಿತದ ವತಿಯಿಂದ ಭಾನುವಾರ ನಡೆದ ಉಡುಪಿ ಜಿಲ್ಲಾ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ರಜತ ಸಂಭ್ರಮದಲ್ಲಿ ನಾವು ಜಿಲ್ಲೆಯ ಹಳೆಯ ನೆನಪುಗಳನ್ನು ಮೆಲುಕು ಹಾಕುವುದರೊಂದಿಗೆ ಹೊಸ ದೃಷ್ಠಿಕೋನದಿಂದ ಹೊಸ ವಿಚಾರಗಳನ್ನು ಯೋಚಿಸಬೇಕಾಗಿದೆ. ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ನಮ್ಮ ಜಿಲ್ಲೆ ಆರೋಗ್ಯ, ಪ್ರವಾಸೋದ್ಯಮ, ಬೀಚ್ ಟೂರಿಸಂ, ಕೃಷಿ, ಸಹಕಾರ, ಬ್ಯಾಂಕಿಂಗ್, ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಇನ್ನು ಈ ಭಾಗದಲ್ಲಿ ಒಂದು ವಿಮಾನ ನಿಲ್ದಾಣ, ಇಎಸ್‌ಐ ಅಸ್ಪತ್ರೆ, ಸರ್ಕಾರಿ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜು ಆದರೆ ರಾಜ್ಯದಲ್ಲಿ ಪೂರ್ಣಪ್ರಮಾಣದ ಮಾದರಿ ಜಿಲ್ಲೆಯಾಗಿ ಗುರುತಿಸಿಕೊಳ್ಳುತ್ತದೆ. ಸ್ಟಾಟ್‌ಅಪ್ ಯೋಜನೆಯಡಿಯಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಪೂರಕ ವಾತಾವರಣವಿದ್ದು, ಜಿಲ್ಲೆಯ ಯುವಜನತೆಗೆ ಉದ್ಯೋಗವಕಾಶ ಸೃಷ್ಠಿಯಾಗುತ್ತದೆ. ಮುಂದಿನ ದಿನಗಳಲ್ಲಿ ಆರ್ಥಿಕ ಪ್ರಗತಿಗೆ ಶಕ್ತಿ ತುಂಬಲು ಸಾಫ್ಟ್‌ವೇರ್ ಉದ್ಯಮ, ಐಟಿ ಪಾರ್ಕಗಳನ್ನು ಜಿಲ್ಲೆಗೆ ತರಲು ಪ್ರಯತ್ನಿಸಲಾಗುವುದು ಎಂದ ಅವರು, ಹೊಸ ಆವಿಷ್ಕಾರಗಳನ್ನು ಅನುಷ್ಠಾನಗೊಳಿಸಲು ಸಾರ್ವಜನಿಕರ ಸಹಭಾಗುತ್ವವೂ ಬೇಕು ಎಂದರು.
ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಾಸಕ ರಘುಪತಿ ಭಟ್, ಗ್ರಾಪಂ ಅಧ್ಯಕ್ಷೆ ಗೀತಾ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನಿರ್ದೇಶಕ ಮಿಥುನ್ ಆರ್. ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ಜಿಪಂ ಸಿಇಒ ಪ್ರಸನ್ನ ಎಚ್., ಬೈಂದೂರು ತಾಪಂ ಸಿಒ ಭಾರತಿ, ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ, ಕುಂದಾಪುರ ತಹಶೀಲ್ದಾರ್ ಕಿರಣ್ ಗೌರಯ್ಯ, ಬಿಇಒ ಮಂಜುನಾಥ ಮೊದಲಾದವರು ಇದ್ದರು. ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಕೆ. ರಾಜು ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಕರುಣಾಕರ ಶೆಟ್ಟಿ ವಂದಿಸಿದರು. ಸುಧಾಕರ ಪಿ., ವಿಶ್ವನಾಥ ಶೆಟ್ಟಿ, ಸುಧಾಕರ ದೇವಾಡಿಗ ನಿರೂಪಿಸಿದರು. ನಂತರ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.