Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ

ಕುಂದಾಪುರ ಡಾಟ್ ಕಾಂ ಸುದ್ದಿ.
ಉಡುಪಿ
,ಅ.19: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನ.1ರಂದು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನ.1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ. ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹರಕ್ಷಕ, ಎನ್.ಸಿ.ಸಿ. ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಕವಾಯತು ನಡೆಯಲಿದ್ದು, ನಂತರದಲ್ಲಿ ಶಾಲಾ ವಿದ್ಯಾಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದ ಅವರು, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ಆಯ್ಕೆಯಾದ ಗಣ್ಯರಿಗೆ ಸನ್ಮಾನ ನಡೆಯಲಿದೆ ಎಂದರು. ಕಾರ್ಯಕ್ರಮಕ್ಕೆ ಜನಪ್ರನಿಧಿಗಳು, ಗಣ್ಯರು ಸೇರಿದಂತೆ ಶಿಷ್ಠಾಚಾರದಂತೆ ಎಲ್ಲರನ್ನೂ ಆಹ್ವಾನಿಸಬೇಕು. ಸಾರ್ವಜನಿಕರು ಹೆಚ್ಚಿನಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿಮಾಡಿದರು.

ಅಂದು ಬೆಳಗ್ಗೆ 8 ಗಂಟೆಗೆ ಬೋರ್ಡ್ ಸ್ಕೂಲಿನಿಂದ ಅಜ್ಜರಕಾಡು ಕ್ರೀಡಾಂಗಣದವರೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ವಿವಿಧ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಯ ಯೋಜನೆಗಳನ್ನು ಸಾರುವ ಸ್ಥಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದರು. ಕಾರ್ಯಕ್ರಮದ ಯಶಸ್ವಿಗೆ ವಿವಿಧ ಉಪಸಮಿತಿಗಳನ್ನು ರಚಿಸಲಾಗಿದ್ದು, ಮೆರವಣಿಗೆಗೆ ಚಲನಚಿತ್ರ ನಟರನ್ನು, ಕಲಾವಿದರನ್ನು ಆಹ್ವಾನಿಸುವಂತೆ ಸಲಹೆ ನೀಡಿದರು.

ಅ.28ರಂದು ನಡೆಯುವ ಕೋಟಿ ಕಂಠಗಾಯನ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ಹೆಚ್ಚು ಸಾರ್ವಜನಿಕರು ಶಾಲಾ ವಿದ್ಯಾರ್ಥಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ನೊಂದಣಿಯನ್ನು ಮಾಡಿಕೊಳ್ಳುವುದರೊಂದಿಗೆ ಗಾಯನದಲ್ಲಿ ಭಾಗವಹಿಸಬೇಕೆಂದು ಮನವಿಮಾಡಿದರು. ಸಭೆಯಲ್ಲಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ. ಎನ್. ತರಬೇತಿ ನಿರತ ಐಎಎಸ್ ಅಧಿಕಾರಿ ಯತೀಶ್ ಆರ್. ಹಾಗೂ ಜಿಲ್ಲಾಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version