ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಡಿ.20: ಶಾಲಾ ಮಕ್ಕಳೊಂದಿಗೆ ಮೃದುವಾಗಿ ಮತ್ತು ಅವರ ಮನಸ್ಸನ್ನು ಅರಿತು ಅತ್ಯಂತ ಸೂಕ್ಷ್ಮವಾಗಿ ವರ್ತಿಸುವ ಕುರಿತಂತೆ ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜುಗಳ ಶಿಕ್ಷಕರಿಗೆ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಸೂಚನೆ ನೀಡಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲೆಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇತ್ತೀಚೆಗೆ ರಾಜ್ಯದ ಕೆಲವು ಜಿಲ್ಲೆಗಳ ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಮೇಲೆ ದೌರ್ಜನ್ಯ ನಡೆಸುತ್ತಿರುವ ಕುರಿತಂತೆ ವರದಿಯಾಗುತ್ತಿದ್ದು, ಮಕ್ಕಳು ಅತ್ಯಂತ ಮೃದು ಮತ್ತು ಸೂಕ್ಷ್ಮ ಮನಸ್ಸಿನವರಾಗಿದ್ದು, ಶಿಕ್ಷಕರು ಮಕ್ಕಳ ಸ್ವಭಾವವನ್ನು ಅರಿತು, ಸ್ಥಿತಿಪ್ರಜ್ಞರಾಗಿ ಮಕ್ಕಳೊಂದಿಗೆ ವರ್ತಿಸಬೇಕಾಗಿರುತ್ತದೆ. ಈ ಬಗ್ಗೆ ಶಿಕ್ಷಕ ತರಬೇತಿ ಅವಧಿಯಲ್ಲಿ ತರಬೇತಿ ನೀಡಿದ್ದರೂ ಸಹ ಇಂತಹ ಘಟನೆಗಳು ನಡೆಯುತ್ತಿರುವುದಕ್ಕೆ ಅತ್ಯಂತ ಬೇಸರ ವ್ಯಕ್ತಪಡಿಸಿದ ಅಪರ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಇಂತಹ ಯಾವುದೇ ಪ್ರಕರಣಗಳು ನಡೆಯದಂತೆ ಮುನ್ನೆಚ್ಚರಿಕೆಯಾಗಿ, ಶಿಕ್ಷಕರು ಮಕ್ಕಳೊಂದಿಗೆ ಸೂಕ್ಷ್ಮ ಮತ್ತು ಸಂಯಮದಿಂದ ವರ್ತಿಸುವ ಕುರಿತಂತೆ ಶೀಘ್ರದಲ್ಲಿ ಜಿಲ್ಲೆಯಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ಮತ್ತು ಮಕ್ಕಳ ಹಕ್ಕುಗಳು, ಅವುಗಳ ರಕ್ಷಣೆ ಕುರಿತಂತೆ ಸಹ ಅಗತ್ಯ ಮಾಹಿತಿ ನೀಡುವಂತೆ ತಿಳಿಸಿದರು.
ಜನವರಿ 6 ರಂದು ಜಿಲ್ಲೆಗೆ ಭೇಟಿ ನೀಡುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಮತ್ತು ಅವರ ನಿಯೋಗಕ್ಕೆ ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತಂತೆ ಕೈಗೊಂಡಿರುವ ಎಲ್ಲಾ ಕ್ರಮಗಳ ಕುರಿತು ಸಂಪೂರ್ಣ ದಾಖಲಾತಿಗಳನ್ನು ಸಿದ್ಧಪಡಿಸಿಟ್ಟುಕೊಂಡು ವರದಿ ನೀಡಿ ಮತ್ತು ಮಕ್ಕಳ ಸಂರಕ್ಷಣೆ, ಸುರಕ್ಷತೆ ಮತ್ತು ಬೆಳವಣಿಗೆಗಾಗಿ ಜಿಲ್ಲೆಯಲ್ಲಿ ಹಲವು ವಿನೂತನ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಇವುಗಳ ಬಗ್ಗೆ ಸಮರ್ಪಕ ವಿವರವಾದ ವರದಿಯನ್ನು ನಿಯೋಗಕ್ಕೆ ನೀಡುವಂತೆ ತಿಳಿಸಿದರು.
ಕಾರ್ಮಿಕ ಇಲಾಖೆ ವತಿಯಿಂದ, ಕಾರ್ಮಿಕ ಮಕ್ಕಳ ಶಿಕ್ಷಣಕ್ಕಾಗಿ ಉಡುಪಿಯ ಬೀಡನಗುಡ್ಡೆ ಮತ್ತು ಬ್ರಹ್ಮಾವರದ ಇಂದಿರಾನಗರದಲ್ಲಿ ಶಿಶುಪಾಲನಾ ಕೇಂದ್ರಗಳನ್ನು ತೆರೆದಿದ್ದು, ಈ ಕೇಂದ್ರಗಳ ಪ್ರಯೋಜನ ಪಡೆಯುವಂತೆ ವಲಸೆ ಕಾರ್ಮಿಕರಿಗೆ ಅರಿವು ಮೂಡಿಸುವಂತೆ ಹಾಗೂ ಜಿಲ್ಲೆಯ ಎಲ್ಲಾ ಹಾಸ್ಟೆಲ್ಗಳಲ್ಲಿ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ಈಗಾಗಲೇ ಹಾಸ್ಟೆಲ್ಗಳಿಗೆ ನಿಯೋಜಿಸಿರುವ ನೋಡೆಲ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ತಿಳಿಸಿದರು.
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಸಭೆಗಳನ್ನು ನಡೆಸಿ, ಮಕ್ಕಳ ಸಮಸ್ಯೆಗಳು ಮತ್ತು ಅವುಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸುವಂತೆ ಮತ್ತು ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳು ಮಕ್ಕಳ ಸುರಕ್ಷತೆ ಮತ್ತು ಸಂರಕ್ಷಣೆಗೆ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಅಪರ ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶಿವಕುಮಾರಯ್ಯ, ಡಿಡಿಪಿಐ ಗಣಪತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಹಾಗೂ ಜಿಲ್ಲೆಯಲ್ಲಿ ಮಕ್ಕಳ ರಕ್ಷಣೆಯಲ್ಲಿ ತೊಡಗಿರುವ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.