ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಡುಪಿ ಲೋಕಾಯುಕ್ತ ಪೊಲೀಸ್ ಠಾಣಾ ವಿಭಾಗದ ವತಿಯಿಂದ ಬೈಂದೂರು ಆಡಳಿತ ಸೌಧದಲ್ಲಿ ಬುಧವಾರ ಬೈಂದೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಸಾರ್ವಜನಿಕ ಅಹವಾಲು ಸ್ವೀಕಾರ ಹಾಗೂ ಜನಸಂಪರ್ಕ ಸಭೆ ನಡೆಯಿತು.
ಈ ವೇಳೆ ಉಡುಪಿ ವಿಭಾಗದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಕೆ.ಸಿ. ಪ್ರಕಾಶ್, ಸಾರ್ವಜನಿಕರ ದೂರಗಳ ಸ್ವೀಕರಿಸಿ ಮಾತನಾಡಿ ಸಾರ್ವಜನಿಕ ಕೆಲಸಗಳನ್ನು ನಿಗದಿತ ಕಾಲಮಿತಿಯಲ್ಲಿ ಮಾಡಿಕೊಡುವುದು ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಸರಿಯಾದ ಸಮಯಕ್ಕೆ ಸರಕಾರಿ ಅಧಿಕಾರಿಗಳಿಂದ ಕೆಲಸಗಳು ಆಗದಿದ್ದಾಗ ಸಹಜವಾಗಿ ಸಾರ್ವಜನಿಕರು ಸಿಟ್ಟುಗೇಳುತ್ತಾರೆ. ಇಂತಹ ಪರಿಸ್ಥಿತಿಯನ್ನು ಎದುರಿಸುವ ಬದಲಿಗೆ ಅವರಿಗೆ ತಿಳಿಹೇಳುವ ಹಾಗೂ ಸಕಾಲದಲ್ಲಿ ಯಾವುದೇ ಅಪೇಕ್ಷೆ ಇಲ್ಲದೇ ಕೆಲಸ ಮಾಡಿಕೊಡುವ ಮನೋಭಾವ ಮುಖ್ಯವಾಗಿದೆ ಎಂದರು.
ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಕೆ.ಸಿ. ಪ್ರಕಾಶ್, ಪೊಲೀಸ್ ನಿರೀಕ್ಷಕರಾದ ಜಯರಾಮ ಡಿ. ಗೌಡ ಮತ್ತು ರಫೀಕ್ ಎಂ ಸಾರ್ವಜನಿಕರ ದೂರುಗಳನ್ನು ಆಲಿಸಿದರು.
ಈ ವೇಳೆ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ, ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ವಲಯ ಅರಣ್ಯಾಧಿಕಾರಿ ಸಿದ್ದೇಶ್, ತಾಲೂಕು ಪಶು ವೈದ್ಯಾಧಿಕಾರಿ ಡಾ. ನಾಗರಾಜ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ್ ಕುಮಾರ್ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಯಿತು. ಕೆಲವು ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳದಲ್ಲಿ ಇತ್ಯಾರ್ಥಗೊಳಿಸಲಾಯಿತು.