Kundapra.com ಕುಂದಾಪ್ರ ಡಾಟ್ ಕಾಂ

ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಉಳಿವಿಗೆ ಸರಕಾರ ಸೂಕ್ತ ಕ್ರಮಕೈಗೊಳ್ಳಬೇಕು: ಕೆ. ವಿಕಾಸ್ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ನೂತನ ಸರಕಾರವು ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ ನೀಡುವ ಜೊತೆಗೆ ಗ್ರಾಮೀಣ ಭಾಗದಲ್ಲಿನ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಸೌಲಭ್ಯ ಕಲ್ಪಿಸಿಕೊಡಲು ಆದ್ಯತೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದ್ದಾರೆ.

ನಗರ ಪ್ರದೇಶದ ಸರ್ಕಾರಿ ಶಾಲೆಗಳು ಸೂಕ್ತ ದಾನಿಗಳ ಹಾಗೂ ಹಳೆ ವಿದ್ಯಾರ್ಥಿಗಳ ಪ್ರೋತ್ಸಾಹದಿಂದ ಮೂಲಭೂತ ಸೌಕರ್ಯ, ಕಂಪ್ಯೂಟರ್, ಅಗತ್ಯ ಶಿಕ್ಷಕರು, ವಾಹನ ವ್ಯವಸ್ಥೆಯನ್ನು ಹೊಂದುತ್ತಿವೆ ಇದು ಉತ್ತಮ ಬೆಳವಣಿಗೆ ಆದರೆ ಇಂತಹ ವ್ಯವಸ್ಥೆಗಳು ಇಲ್ಲದ ಹಳ್ಳಿ ಪ್ರದೇಶದ ಶಾಲೆಗಳು ಬಾಗಿಲು ಮುಚ್ಚುವ ಪರಿಸ್ಥಿತಿ ಬಂದಿದೆ.

ಪಟ್ಟಣ ಹಾಗೂ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ನಡುವೆ ವಿದ್ಯಾರ್ಥಿಗಳ ಸೇರ್ಪಡೆಗೆ ಪೈಪೋಟಿ ನಡೆಯುತ್ತಿದೆ. ಪಟ್ಟಣದ ಶಾಲೆಗಳ ಗುಣಮಟ್ಟ ಗ್ರಾಮೀಣ ಭಾಗದ ಕೆಲವು ಶಾಲೆಗಲ್ಲಿ ಇಲ್ಲದ ಕಾರಣ ಇಂತಹ ಶಾಲೆಗಳು ಮಕ್ಕಳ ಕೊರತೆಯಿಂದ ಮುಚ್ಚುವ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ವಿಶೇಷವಾಗಿ ನಕ್ಸಲ್ ಪೀಡಿತ ಪ್ರದೇಶದ, ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದ ಶಾಲೆಗಳು ಮೂಲಭೂತ ಸೌಕರ್ಯ ಇತರೆ ಕೊರತೆಗಳಿಂದ ಬಾಗಿಲು ಮುಚ್ಚುವ ಹಂತಕ್ಕೆ ಬಂದು ತಲುಪಿವೆ.

ನೂತನ ಸರ್ಕಾರ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಕೊಡುವುದರ ಜೊತೆ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಉಳಿವಿಗೆ ವಿಶೇಷ ಆದ್ಯತೆ ನೀಡಬೇಕು ಎಂದಿದ್ದಾರೆ.

Exit mobile version