Kundapra.com ಕುಂದಾಪ್ರ ಡಾಟ್ ಕಾಂ

ನಟ – ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ’ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ವಾಷಿಂಗ್ಟನ್ ಡಿಸಿ:
ಖ್ಯಾತ ನಟ – ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ವಾಷಿಂಗ್ಟನ್ನ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಅಲ್ಲಿನ ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸೆನೆಟರ್ ಡಾ||ದೆರೀಕ್ ಟ್ರಸ್ಫರ್ಡ್ ಮಾತನಾಡಿ, ರಿಷಬ್ ಶೆಟ್ಟಿ ಅವರ “ಕಾಂತಾರ” ಸಿನಿಮಾವನ್ನು ಯುನಿವರ್ಸಲ್ ಸಿನಿಮಾ ಎಂದು ಮುಕ್ತಕಂಠದಿಂದ ಶ್ಲಾಘಿಸಿದರು. ಅಮೇರಿಕಾ ಹಾಗೂ ವಾಷಿಂಗ್ಟನ್ ನಗರಕ್ಕೆ ಕನ್ನಡಿಗರು ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಅವರು ಅಮೇರಿಕಾದ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿದರು.

ವಾಷಿಂಗ್ಟನ್ ನ ಸಿಯಾಟಲ್ ನಗರದ ಪ್ಯಾರಾಮೌಂಟ್ ಥಿಯೇಟರ್ ಗೆ 95 ವರ್ಷಗಳ ಇತಿಹಾಸವಿದೆ. ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಸಾಕಷ್ಟು ಗಣ್ಯರು ಈ ಸ್ಥಳದಲ್ಲಿ ಭಾಷಣ ಮಾಡಿದ್ದರೆ. ಅನೇಕ ಹೆಸರಾಂತ ಕಲಾವಿದರ ಕಾರ್ಯಕ್ರಮಗಳು ಇಲ್ಲಿ ನಡೆದಿದೆ. ಇಂತಹ ಇತಿಹಾಸವಿರುವ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪಡೆದಿರುವುದಕ್ಕೆ ರಿಷಬ್ ಶೆಟ್ಟಿ ಸಂತಸಪಟ್ಟಿದ್ದಾರೆ. ಚಿನ್ನದ ಲೇಪನ ಹೊಂದಿರುವ ಈ ಟ್ರೋಫಿ, ಸುಮಾರು ಐದು ಕೆಜಿ ತೂಕವಿದೆ.

ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಅವರೊಂದಿಗೆ ಪ್ರಶಸ್ತಿ ಸ್ವೀಕರಿಸಿದರು. 1800 ಕ್ಕೂ ಅಧಿಕ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Exit mobile version