Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿಯಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ ಎಸ್ಐಟಿಗೆ ವಹಿಸಲ್ಲ, ಕಡಲ್ಕೊರೆತ ತಡೆಗೆ ಯೋಜನೆ: ಸಿಎಂ ಸಿದ್ಧರಾಮಯ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಉಡುಪಿಯ ಕಾಲೇಜೊಂದರಲ್ಲಿ ನಡೆದ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಎಸ್ಐಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಉಡುಪಿ ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದ ಸಂದರ್ಭ ಪಡುಬಿದ್ರಿಯಲ್ಲಿ ಕಡಲ್ಕೊರೆತದಿಂದ ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ಬಳಿಕ ಮಾತನಾಡಿದರು. ವೀಡಿಯೋ ಪ್ರಕರಣದಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್.ಐ.ಆರ್ ಆಗಿದೆ. ತನಿಖೆಯನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದಾರೆ. ಈ ಹೊತ್ತಿನಲ್ಲಿ ಎಸ್ಐಟಿ ಪ್ರಶ್ನೆ ಉದ್ಭವಿಸುವುದಿಲ್ಲ. ತನಿಕೆಯ ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದವರು ತಿಳಿಸಿದ್ದಾರೆ.

ಉಡುಪಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಯ ವೇತನ ಬಿಡುಗಡೆಯಾಗದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಈ ಬಗ್ಗೆ ಮಾಹಿತಿ ಇಲ್ಲ. ಕೂಡಲೇ ಹಣಕಾಸು ಇಲಾಖೆಗೆ ಸೂಚನೆ ನೀಡಲಾಗುವುದು ಎಂದರು.

ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರದ ಯೋಜನೆ:
ಕರಾವಳಿಯಲ್ಲಿ ಕಡಲ್ಕೊರೆತ ತಡೆ ಕುರಿತಂತೆ ಶಾಶ್ವತ ಪರಿಹಾರ ಒದಗಿಸಲು ಕ್ರಿಯಾ ಯೋಜನೆ ರೂಪಿಸಲಾಗುವುದು, ಇದಕ್ಕೆ ಎಷ್ಟು ಹಣ ಬೇಕು ಎಂಬ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಅನುದಾನ ಹೊಂದಾಣಿಕೆ ಮಾಡಲಾಗುವುದು.

ಕರಾವಳಿ ಭಾಗದ ಕಡಲ ತೀರದಲ್ಲಿ ಸಾಕಷ್ಟು ಕಾಮಗಾರಿಗಳು ನೆಡೆದಿದ್ದು, ಇನ್ನು ಅನೇಕ ಕಾಮಗಾರಿ ಬಾಕಿ ಇವೆ ಹಾಗೂ ಹೊಸ ಕಾಮಗಾರಿ ಕೈಗೊಳ್ಳಬೇಕಿದೆ ಎಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನೈತಿಕ ಪೊಲೀಸ್‌ಗಿರಿ ಬೇಡ:
ಇದಕ್ಕೂ ಮೊದಲು ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ ಎಂದು ಪೊಲೀಸರಿಗೆ ಸೂಚಿಸಲಾಗಿದೆ ಎಂದರು.

ಸೌಜನ್ಯ ಪ್ರಕರಣ ಅಗತ್ಯವಿದ್ದರೆ ಮೇಲ್ಮನವಿ:
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುದು. ಕಾನೂನಿನ ಪ್ರಕಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದರು. ಅಧಿಕಾರಿಗಳಿಂದ ಲೋಪವಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖವಿರುವ ಬಗ್ಗೆ ಉತ್ತರಿಸಿ , ತೀರ್ಪು ಓದಿದ ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದರು.

ಸುಳ್ಳುಸುದ್ದಿ ಹಬ್ಬಿಸಿದರೆ ಕ್ರಮ:
ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಅಥವಾ ವ್ಯಕ್ತಿ ಯ ವಿರುದ್ಧವಾಗಿ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಟೀಕೆ ಮಾಡಿದರೂ ಕ್ರಮ ಕೈಗೊಳ್ಳುತ್ತಿದ್ದೀರಿ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಟೀಕೆ ಮಾಡಿದರೆ ಕ್ರಮ ತೆಗೆದುಕೊಳ್ಳುವುದಿಲ್ಲ. ಸುಳ್ಳು ಸುದ್ದಿ ಹಬ್ಬಿಸಿದರೆ ತೆಗೆದುಕೊಳ್ಳಲಾಗುವುದು ಎಂದರು. ಕುಟುಂಬದವರ ಮೇಲೆ ಸುಳ್ಳು ಸುದ್ದಿ ಹಬ್ಬಿಸುವುದು, ವೈಯಕ್ತಿಕವಾಗಿ ತೇಜೋವಧೆ ಮಾಡುವುದು ಬೇರೆ ಎಂದರು.

ವಿದ್ಯಾರ್ಥಿನಿ ನಿಲಯಕ್ಕೆ ಭೇಟಿ:
ಉಡುಪಿ ಡಿ.ದೇವರಾಜ ಅರಸು ಹಿ0ದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ನಿಲಯಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಾಸ್ಟೆಲ್ ಪರಿಶೀಲನೆ ನಡೆಸಿದ ಬಳಿಕ ವಿದ್ಯಾರ್ಥಿನಿಯರೊಂದಿಗೆ ಮಾತುಕತೆ ನಡೆಸಿದರು. ಸಮಸ್ಯೆಗಳೇನೇ ಇದ್ದರೂ ಹೇಳಿಕೊಳ್ಳಿ ಎಂದ ಅವರು, ನನ್ನ ಬಳಿ ಹೇಳಲು ಸಾಧ್ಯವಾಗದಿದ್ದರೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಹೇಳಿ ಎಂದು ಸಲಹೆ ನೀಡಿದರು. ಹಾಸ್ಟ್ಲ್ ಕೊಠಡಿ ಸ್ವಚ್ಛತೆ, ಉಟ ತಿಂಡಿ, ಇನ್ನಿತರ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡರು.

ಸಿಎಂ ಉಡುಪಿ ಭೇಟಿ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬಂದರು ಮತ್ತು ಮೀನುಗಾರಿಕೆ ಸಚಿವ ಮಾಂಕಾಳ್ ವೈದ್ಯ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮತ್ತಿತರರು ಇದ್ದರು.

Exit mobile version