ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ಮಂಗಳವಾರದಂದು ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆಯ ಕುರಿತು ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕ್ಯಾಥರೀನ್ ಜೆನ್ನಿಫರ್, ಕ್ಲಿನಿಕಲ್ ಸೈಕಾಲಜಿಸ್ಟ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಉಡುಪಿ ಅವರು ಮಾತನಾಡಿ ’ ಈ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಸಾಮರ್ಥ್ಯವೇನು ಎಂಬುದನ್ನು ಅರಿತು ಅದರಂತೆ ಜೀವಿಸಬೇಕು. ಬೇರೆಯವರ ಜೀವನಶೈಲಿ ನಮ್ಮದಾಗದಿರಲಿ. ಸಕಾರಾತ್ಮಕ ಮನೋಭಾವ, ಚಿಂತನೆಗಳನ್ನು ಅನುಸರಿಸಬೇಕು’ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾರ್ಕಳ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ಸಂದೀಪ್ ಕುದ್ವ ಅವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ’ಮಾನಸಿಕ ಸಮತೋಲನ ಕಾಯ್ದುಕೊಳ್ಳುವಿಕೆಯಿಂದ ಆತ್ಮಹತ್ಯೆಯಂತಹ ಘಟನೆಗಳನ್ನು ತಡೆಗಟ್ಟಲು ಸಾಧ್ಯ’ ಎಂದರು.
ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಶಿಧರ್ ಎಚ್. ಅವರು ’ವೈಜ್ಞಾನಿಕ ಚಿಕಿತ್ಸಾ ಪದ್ಧತಿಗಳಿಗೆ ಹೊಂದಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು’ ಎಂದರು.
ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅವರು ಕಾರ್ಯಕ್ರಮವನ್ನು ಕುರಿತು ಅಧ್ಯಕ್ಷೀಯ ನುಡಿಗಳನ್ನಾಡುತ್ತಾ ’ಪ್ರತಿಯೊಂದು ಸಮಸ್ಯೆಗೂ ಪರಿಹಾರ ಎಂಬುವುದಿದೆ. ಆತ್ಮಹತ್ಯೆ ಪರಿಹಾರವಲ್ಲ. ಆತ್ಮಹತ್ಯೆ ಎಂಬ ಸಾವು ಸಾಧನೆಯಲ್ಲ. ಬದುಕಿ ಬದುಕನ್ನು ಗೆದ್ದು ಸಾಧಿಸಿ ತೋರಿಸಬೇಕು’ ಎಂದರು.
ಈ ಸಂದರ್ಭದಲ್ಲಿ ’ಆತ್ಮಹತ್ಯೆಯನ್ನು ತಡೆಗಟ್ಟುವಲ್ಲಿ ಸಮುದಾಯದ ಪಾತ್ರ’ ಎಂಬ ವಿಷಯದ ಕುರಿತು ಕರಪತ್ರ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಹಿರ್ಗಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಮಾ, ಆಶಾ ಕಾರ್ಯಕರ್ತೆ ಸುಜಾತ, ಬೋಧಕ ಮತ್ತು ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅರ್ಥಶಾಸ್ತ್ರ ಉಪನ್ಯಾಸಕ ಉಮೇಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.