Kundapra.com ಕುಂದಾಪ್ರ ಡಾಟ್ ಕಾಂ

ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶದ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ ಸ್ವಾಧೀನ ಪ್ರಕ್ರಿಯೆಯನ್ನು ಆದ್ಯತೆಯ ಮೇಲೆ ಕೈಗೊಂಡು ಕೈಗಾರಿಕಾ ಪ್ರದೇಶವನ್ನು ವಿಸ್ತೀರ್ಣ ಮಾಡಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಕ್ಲಸ್ಟರ್ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಜಿಲ್ಲಾ ಮಟ್ಟದ ರಫ್ತು ಉತ್ತೇಜನಾ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಈಗಾಗಲೇ ಕೆರೆಬೆಟ್ಟು ಗ್ರಾಮದಲ್ಲಿ 31.28 ಎಕ್ರೆ, ಶಿವಪುರ ಗ್ರಾಮದಲ್ಲಿ 45.75 ಎಕ್ರೆ ಸೇರಿದಂತೆ ಒಟ್ಟು 77.03 ಎಕ್ರೆ ಖಾಸಗಿ ಜಮೀನನ್ನು ಭೂ ಮಾಲೀಕರಿಂದ ಪರಿಹಾರ ಧನವನ್ನು ಪಾವತಿಸಿ, ನಿಯಮಾನುಸಾರ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ, 36.56 ಎಕ್ರೆ ಸರ್ಕಾರಿ ಜಮೀನು ಮಂಜೂರಾತಿ ಪ್ರಕ್ರಿಯೆಯು ಬಾಕಿ ಇದೆ. ಈ ಕೂಡಲೇ ವಿಶೇಷ ಭೂ ಸ್ವಾಧೀನ ಅಧಿಕಾರಿಗಳು, ಕೆ.ಐ.ಎ.ಡಿ.ಬಿ. ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಸ್ವಾಧೀನ ಪ್ರಕ್ರಿಯೆಯನ್ನು ತಕ್ಷಣದಲ್ಲಿಯೇ ಪೂರ್ಣಗೊಳಿಸಬೇಕು ಎಂದರು.

ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ 44.84 ಎಕ್ರೆ ಖಾಸಗಿ ಜಮೀನು ಹಾಗೂ 5.58 ಎಕ್ರೆ ಸರ್ಕಾರಿ ಜಮೀನು ಸೇರಿದಂತೆ ಒಟ್ಟು 50.42 ಎಕ್ರೆ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯು ಪ್ರಗತಿ ಕುಂಠಿತವಾಗಿರುವ ಬಗ್ಗೆ ವಿಷಾಧಿಸಿದ ಅವರು, ಈ ಬಗ್ಗೆ ವಿಶೇಷ ಗಮನಹರಿಸಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಬೆಳಪು ಕೈಗಾರಿಕಾ ಪ್ರದೇಶದಲ್ಲಿ ಅತ್ಯಗತ್ಯ ಮೂಲಸೌಕರ್ಯಗಳಾದ ಚರಂಡಿ ವ್ಯವಸ್ಥೆ ಸಮರ್ಪಕವಾಗಿ ಇಲ್ಲದೇ ತೊಂದರೆ ಉಂಟಾಗುತ್ತಿದೆ. ಈ ಬಗ್ಗೆ ಕೆ.ಐ.ಎ.ಡಿ.ಬಿ ಅಧಿಕಾರಿಗಳು ಕೂಡಲೇ ಸ್ಪಂದಿಸಿ, ಮೂಲಸೌಕರ್ಯಗಳನ್ನು ಕಲ್ಪಿಸಿಕೊಡಬೇಕಾಗಿ ಸೂಚನೆ ನೀಡಿದರು.

ಮಣಿಪಾಲದ ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯವಿರುವ ರಸ್ತೆ ಸಂಪರ್ಕ ಕಾಮಗಾರಿಗಳನ್ನು ಮಳೆಗಾಲ ಮುಗಿದ ಕೂಡಲೇ ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದ ಅವರು, ಈ ಭಾಗದಲ್ಲಿರುವ ರೆಡಿಮಿಕ್ಸ್ ಕೇಂದ್ರಗಳಲ್ಲಿ ವ್ಯವಸ್ಥಿತವಾದ ನಿರ್ವಹಣೆ ಇಲ್ಲದ ಕಾರಣ ವಾಯುಮಾಲಿನ್ಯ ಉಂಟಾಗುತ್ತಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿಗಳು ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ ಆರ್ಥಿಕ ನೆರವು ಕೋರಿ ಅರ್ಜಿಗಳನ್ನು ಬ್ಯಾಂಕುಗಳು ನಿಯಮಾನುಸಾರವಾಗಿನ ಶೀಘ್ರವಾಗಿ ವಿಲೇವಾರಿ ಮಾಡಬೇಕು ಎಂದ ಅವರು, ಈ ಯೋಜನೆಯ ಆರ್ಥಿಕ ಲಾಭ ಪಡೆದು ಯಶಸ್ವಿಯಾದವರ ಯಶೋಗಾಥೆಯನ್ನು ಕ್ರೋಢೀಕರಿಸಿ, ಪ್ರಚಾರಪಡಿಸಿ, ಇತರರನ್ನು ಉತ್ತೇಜಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ರಫ್ತುದಾರರನ್ನು ಉತ್ತೇಜಿಸಲು ಎಲ್ಲಾ ರೀತಿಯಲ್ಲೂ ಸಹಕರಿಸಬೇಕು. ಅವರುಗಳಿಗೆ ಅಗತ್ಯವಿರುವ ಪರವಾನಿಗೆ, ನಿರಪೇಕ್ಷಣಾ ಪತ್ರಗಳನ್ನು ವಿಳಂಬವಿಲ್ಲದೇ ನಿಯಮಾನುಸಾರ ಶೀಘ್ರವಾಗಿ ನೀಡಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಪೌರಾಯುಕ್ತ ರಾಯಪ್ಪ, ಕೆ.ಐ.ಎ.ಡಿ.ಬಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸಮೂರ್ತಿ, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್ ಕುಂದರ್, ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version