ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು,ಸೆ.27: ರಾಜ್ಯದ ಪಶ್ಚಿಮಘಟ್ಟದ 20,668 ಚ.ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿರುವ ಡಾ. ಕೆ. ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸುವ ರಾಜ್ಯ ಸರಕಾರದ ಈ ಹಿಂದಿನ ನಿರ್ಧಾರವನ್ನೇ ಸಚಿವ ಸಂಪುಟ ಸಭೆ ಎತ್ತಿ ಹಿಡಿದಿದೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆ ಈ ಮಹತ್ವದ ನಿರ್ಣಯ ಕೈಗೊಂಡಿದೆ ಎಂದು ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ.
ಮಾನವನ ಹಸ್ತಕ್ಷೇಪ ಮಾಡುತ್ತಿರುವುದರಿಂದಾಗಿ ಪರಿಸರಕ್ಕೆ ಧಕ್ಕೆ ಉಂಟಾಗುತ್ತಿದೆ. ಆ ಮೂಲಕ ಜೀವ ಸಂಕುಲಕ್ಕೂ ಅಪಾಯ ಎದುರಾಗಲಿದೆ ಎನ್ನುವುದು ಪರಿಸರ ತಜ್ಞರ ಆತಂಕಕ್ಕೆ ಕಾರಣವಾಗಿತ್ತು. ಹಾಗಾಗಿ ಇದಕ್ಕಾಗಿ ಕಸ್ತೂರಿ ರಂಗನ್ ವರದಿಯನ್ನು ಸಿದ್ಧಪಡಿಸಲಾಗಿತ್ತು. ಆದರೆ ಭಾರಿ ವಿರೋಧದ ಮಧ್ಯೆ ಸಂಪುಟ ಸಭೆಯಲ್ಲಿ ವರದಿಯನ್ನು ತಿರಸ್ಕಾರ ಮಾಡಲಾಗಿದೆ.
ಕಸ್ತೂರಿ ರಂಗನ್ ಸಮಿತಿ ವರದಿ ಹೀಗಿದೆ
ಕಸ್ತೂರಿ ರಂಗನ್ ಸಮಿತಿಯು ಪಶ್ಚಿಮ ಘಟ್ಟ ವ್ಯಾಪ್ತಿಯ 59,949 ಚದರ ಕಿ.ಮೀ. ವ್ಯಾಪ್ತಿಯ ಪ್ರದೇಶ ಅಂದರೆ ಶೇಕಡಾ 36.4ರಷ್ಚು ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಒಳಪಡುತ್ತದೆ ಎಂದು ಗುರುತಿಸಿದೆ. ಈ ಪ್ರದೇಶಗಳಲ್ಲಿ ಗಣಿಗಾರಿಕೆ, ಜಲವಿದ್ಯುತ್, ಕ್ವಾರಿ, ಮರಳುಗಾರಿಕೆ ಪರಿಸರ ವಿರೋಧಿ ಕೈಗಾರಿಕೆ, ಪವನ ವಿದ್ಯುತ್ ಯೋಜನೆಗಳನ್ನು ಸಂಪೂರ್ಣ ನಿಷೇಧಿಸಬೇಕು. 20,000 ಚ,ಮೀ, ಬೃಹತ್ ಆದ ಯಾವುದೇ ಕಟ್ಟಡ ನಿರ್ಮಿಸುವ ಹಾಗಿಲ್ಲ. ಇಎಸ್ಎನಿಂದ 10ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ನಡೆಸುವುದಾದರೇ ಪರಿಸರ ಇಲಾಖೆ, ಸ್ಥಳೀಯ ಗ್ರಾಮಸಭೆ ಅನುಮತಿ ಪಡೆಯಬೇಕು. ಈ ಪ್ರದೇಶದಲ್ಲಿ ಸಿಮೆಂಟು, ಕಲ್ಲು, ರಸಾಯನಿಕ ಬಳಸಲು, ಜನವಸತಿ ನಿರ್ಮಿಸಲು ಯಾವುದೇ ಅವಕಾಶವಿಲ್ಲ.
ಒಂದೇ ವೇಳೆ ಕಸ್ತೂರಿ ರಂಗನ್ ವರದಿ ಅನುಷ್ಠಾನವಾದರೆ ಪಶ್ಚಿಮ ಘಟ್ಟ ಮತ್ತು ಮಲೆನಾಡು ಸೂಕ್ಷ್ಮ ಪರಿಸರ ವಲಯವಾಗಿ ಪರಿವರ್ತನೆ ಆಗುತ್ತದೆ. ಅಲ್ಲಿ ಮಾನವ ಹಸ್ತಕ್ಷೇಪ ಮಾಡುವ ಹಾಗೇ ಇಲ್ಲ. ಇಡೀ ಭೂ ಭಾಗ ರಾಜ್ಯದ ನಿಯಂತ್ರಣದಿಂದ ಕೇಂದ್ರದ ಸುಪರ್ದಿಗೆ ಹೋಗುತ್ತದೆ. ಆಗ ಅಲ್ಲಿ ವಾಸಿಸುತ್ತಿರುವ ಆದಿವಾಸಿಗಳನ್ನು ಒಕ್ಕಲು ಎಬ್ಬಿಸಬೇಕಾಗುತ್ತದೆ. ಹಾಗಾಗಿ ಈ ಎಲ್ಲಾ ವಿಚಾರಗಳಿಂದ ಕಸ್ತೂರಿ ರಂಗನ್ ವರದಿಗೆ ಭಾರಿ ವಿರೋಧ ವ್ಯಕ್ತವಾಗಿತ್ತು.
ಸಂಪುಟ ಸಭೆಯಲ್ಲಿ ನಿಲುವು ಸ್ಪಷ್ಟ:
ರಾಜ್ಯದಲ್ಲಿ ರಾಷ್ಟ್ರೀಯ ಉದ್ಯಾನಗಳು, ವನ್ಯಜೀವಿ ಧಾಮಗಳು ಸೇರಿದಂತೆ ಒಟ್ಟು 16,114 ಚ.ಕಿ.ಮೀ ಸಂರಕ್ಷಿತ ಅರಣ್ಯ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಒಪ್ಪಲಾಗಿದೆ. ಪಶ್ಚಿಮ ಘಟ್ಟ ಸಂರಕ್ಷಣೆ ದೃಷ್ಟಿಯಿಂದ ಈ ಸಂರಕ್ಷಿತ ಪ್ರದೇಶವನ್ನು ಉಳಿಸಿಕೊಳ್ಳಲು ರಾಜ್ಯ ಸರಕಾರ ಬದ್ಧವಾಗಿದೆ. ಆದರೆ, ಡಾ. ಕಸ್ತೂರಿ ರಂಗನ್ ವರದಿಯಲ್ಲಿ ಉಲ್ಲೇಖಿಸಿರುವಂತೆ ಇನ್ನಷ್ಟು ಪ್ರದೇಶಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಒಪ್ಪಲಾಗದು. ಡಾ. ಕಸ್ತೂರಿ ರಂಗನ್ ವರದಿಯಲ್ಲಿ ಉಲ್ಲೇಖಿಸಿರುವಂತೆ ಇನ್ನಷ್ಟು ಹೆಚ್ಚಳ ಮಾಡಿದರೆ ತಲೆಮಾರುಗಳಿಂದ ಅರಣ್ಯದಂಚಿನಲ್ಲಿ ವಾಸಿಸುವ ಸಾವಿರಾರು ಕುಟುಂಬಗಳನ್ನು ಒಕ್ಕಲೆಬ್ಬಿಸಬೇಕಾಗುತ್ತದೆ. ಹಾಗಾಗಿ ವರದಿಯನ್ನು ಒಪ್ಪಲಾಗದು ಎಂಬ ಸ್ಪಷ್ಟ ತೀರ್ಮಾನಕ್ಕೆ ಸಂಪುಟ ಬಂದಿದೆ.
ಡಾ. ಕಸ್ತೂರಿ ರಂಗನ್ ವರದಿ ಸಂಬಂಧ ರಾಜ್ಯದ ಅಭಿಪ್ರಾಯವನ್ನು ಅಂತಿಮಗೊಳಿಸುವ ಸಂಬಂಧ ಕಳೆದ ವಾರ ಪಶ್ಚಿಮಘಟ್ಟ ವ್ಯಾಪ್ತಿಯ ಸಚಿವರು, ಶಾಸಕರು ಮತ್ತು ಸಂಸದರ ಅಭಿಪ್ರಾಯ ಪಡೆಯಲಾಗಿತ್ತು. ಬಳಿಕ, ಸಚಿವ ಸಂಪುಟದ ಉಪಸಮಿತಿ ಸಭೆಯಲ್ಲಿ ಚರ್ಚಿಸಲಾಗಿತ್ತು. ಅಂತಿಮವಾಗಿ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಕೇಂದ್ರಕ್ಕೆ ಅಭಿಪ್ರಾಯವನ್ನು ತಲುಪಿಸಲಾಗುತ್ತಿದೆ.