ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಸಂಸ್ಥೆಯ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಧ್ವಜಾರೋಹಣಗೈದು, ರಾಜ್ಯೋತ್ಸವದ ಶುಭ ಸಂದೇಶವನ್ನು ನೀಡಿದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಕೃಷ್ಣ ಅಡಿಗ, ಪ್ರಾಥಮಿಕ ಶಾಲಾ ಮುಖ್ಯಸ್ಥೆ ರೇಷ್ಮಾ ಡಿಸೋಜ ಅವರು ಕನ್ನಡಾಂಬೆ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಗೈದರು.
ವಿದ್ಯಾರ್ಥಿಗಳಾದ ಅಂಕಿತಾ, ರಜತ್. ಆರ್ ಪೂಜಾರಿ ರಾಜ್ಯೋತ್ಸವದ ಕುರಿತು ಮಾತನಾಡಿದರು. ಶಾಲಾ ವಿದ್ಯಾರ್ಥಿನಿಯರು ಕನ್ನಡ ಹಾಡುಗಳನ್ನು ಹಾಡಿದರು. ಸಮಾರಂಭದಲ್ಲಿ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ, ಎನ್.ಸಿ.ಸಿ, ಸ್ಕೌಟ್ಸ್, ಗೈಡ್ಸ್ ಮತ್ತು ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಪ್ರೌಢ ಶಾಲಾ ಶಿಕ್ಷಕಿ ರೇಖಾ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ವಿಕಾಸ್ ಮೇಟಿ ಅವರು ಸರ್ವರನ್ನು ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಶಿಕ್ಷಕಿ ಸುಜಾತಾ ಗಿರೀಶ್ ಅವರು ಧನ್ಯವಾದ ಸಮರ್ಪಣೆ ಗೈದರು.