Site icon Kundapra.com ಕುಂದಾಪ್ರ ಡಾಟ್ ಕಾಂ

ಕನ್ನಡ ನಾಡು ಹಾಗೂ ಕನ್ನಡ ಭಾಷೆ ಪ್ರತಿಯೊಬ್ಬರ ಹೆಗ್ಗಳಿಕೆ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಕನ್ನಡ ನಾಡು ನುಡಿಯ ಕುರಿತು ಅಭಿಮಾನವನ್ನು ಮೂಡಿಸುವ ಉದ್ದೇಶದಿಂದ “ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ”ಯು ಪ್ರತಿ ಜಿಲ್ಲೆಗಳಿಗೆ ಸಂಚರಿಸುತ್ತಿದ್ದು, ಅನೇಕ ಶತಮಾನಗಳ ಇತಿಹಾಸವನ್ನು ಹೊಂದಿದ ಕನ್ನಡ ನಾಡು ಹಾಗೂ ಕನ್ನಡ ಭಾಷೆ ಪ್ರತಿಯೊಬ್ಬರ ಹೆಗ್ಗಳಿಕೆಯಾಗಿದೆ ಎಂದು ಡಾ.ಕೆ.ವಿದ್ಯಾಕುಮಾರಿ ಹೇಳಿದರು.

ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಕ್ಕೆ ಸ್ವಾಗತ ಕೋರಿ, ಚಂಡೆ ಬಾರಿಸುವ ಮೂಲಕ ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಕನ್ನಡ ಪರಂಪರೆ ದೇಶದ ಪ್ರಾಚೀನ ಪರಂಪರೆಯಲ್ಲಿ ಒಂದಾಗಿದೆ ಸುಮಾರು 2000 ಕ್ಕೂ ಹೆಚ್ಚು ವರ್ಷಗಳ ಸುದೀರ್ಘ ಇತಿಹಾಸ ಹೊಂದಿದೆ. ಕನ್ನಡ ನುಡಿಯನ್ನು ಕಟ್ಟುವ ಉಳಿಸಿ ಬೆಳೆಸುವ ಕಾಯಕದಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದ ಅವರು 87ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20, 21 ಹಾಗೂ 22 ರಂದು ಮಂಡ್ಯ ಜಿಲ್ಲೆಯಲ್ಲಿ ನಡೆಯಲಿದೆ. ಜಿಲ್ಲೆಯ ಕನ್ನಡ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು. 

ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನವು ಅದ್ದೂರಿಯಾಗಿ ನಡೆದಿದ್ದು, ಮುಂಬರುವ ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನವು ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.   

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಕನ್ನಡ ಭಾಷೆಯ ಸೊಗಡನ್ನು ಎಲ್ಲೆಡೆ ಪಸರಿಸುವ ಜೊತೆಗೆ, ಮಾತೃ ಭಾಷೆಯ ಕುರಿತು ಭಾಷಾಭಿಮಾನವನ್ನು ಬೆಳಸಿಕೊಂಡು ಕನ್ನಡ ನಾಡು ನುಡಿ ಹಾಗೂ ಸಂಸ್ಕೃತಿಯ ಅಭಿವೃದ್ಧಿಗಾಗಿ ಪ್ರತಿಯೊಬ್ಬರು ಬದ್ದರಾಗಿ ಕಾರ್ಯನಿರ್ವಹಿಸಬೇಕು ಎಂದರು.

ಮೆರವಣಿಗೆಯ ಮೂಲಕ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಯನ್ನು ಬೀಳ್ಕೋಡಲಾಯಿತು.

 ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ನಿರೂಪಿಸಿದರೆ, ಕ.ಸಾ.ಪ ದ ಕಾರ್ಯದರ್ಶಿ ಸುಬ್ರಮಣ್ಯ ಶೆಟ್ಟಿ ವಂದಿಸಿದರು.

Exit mobile version