ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲೇ ನೀಡಬೇಕು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಇದರಿಂದ ಸಾಕಷ್ಟು ಪ್ರಯೋಜನಗಳಿದೆ. ಸುಮಾರು ಒಂದು ಶತಮಾನದ ಹಿಂದೆ ಏನೂ ವ್ಯವಸ್ಥೆಗಳಿಲ್ಲದ ದಿನಗಳಲ್ಲಿ ಗಂಗೊಳ್ಳಿಯಂತಹ ಗ್ರಾಮೀಣ ಬಂದರು ಪ್ರದೇಶದಲ್ಲಿ ಸ್ಥಾಪನೆಗೊಂಡ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆ ಲಕ್ಷಾಂತರ ವಿದ್ಯಾರ್ಥಿಗಳ ಬಾಳಿನಲ್ಲಿ ಬೆಳಕಾಗಿದೆ. ಶಾಲೆಯನ್ನು ಸ್ಥಾಪಿಸಿದ ಹಿರಿಯರ ದೂರದೃಷ್ಟಿಯ ಫಲವಾಗಿ ಶಾಲೆಯ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗಳ ಮೂಲಕ ಗುರುತಿಸಿಕೊಳ್ಳುವಂತಾಗಿದೆ ಎಂದು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಕೋ-ಆಪರೇಟಿವ್ ಸೊಸೈಟಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗಣೇಶ ನಾಯಕ್ ಹೇಳಿದರು.
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಬೈಲೂರು ರಾಮರಾವ್ ಶ್ಯಾನುಭಾಗ್ ರಂಗ ಮಂಟಪದಲ್ಲಿ ಶನಿವಾರ ನಡೆದ ಜಿಎಸ್‌ವಿಎಸ್ ಅಸೋಸಿಯೇಶನ್ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಶಾಲಾ ವಾರ್ಷಿಕೋತ್ಸವದ ಅಧ್ಯಕ್ಷತೆಯನ್ನು ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ವಹಿಸಿದ್ದರು.
ಶಾಲೆಯ ಹಳೆ ವಿದ್ಯಾರ್ಥಿ ಡಾ. ನವ್ಯಾ ಕಲೈಕಾರ್ ಸ್ವಸ್ತಿ ವಾಚನಗೈದರು. ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಕಾರ್ಯದರ್ಶಿ ಅಜಿತ್ ಭಟ್ ಉಪಸ್ಥಿತರಿದ್ದರು.
ಇದೇ ಸಂದರ್ಭ ನಿವೃತ್ತಿ ಹೊಂದಲಿರುವ ಶಾಲೆಯ ಮುಖ್ಯ ಶಿಕ್ಷಕ ಜಿ. ವಿಶ್ವನಾಥ ಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶೈಕ್ಷಣಿಕ ಹಾಗೂ ಪಾಠೇತರ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯ ಜಿ. ವಿಶ್ವನಾಥ ಭಟ್ ಸ್ವಾಗತಿಸಿದರು. ಶಾಲೆಯ ಆಡಳಿತ ಮಂಡಳಿ ಸದಸ್ಯ ಕೆ. ರಾಮನಾಥ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿ ಲಕ್ಷ್ಮೀ ವರದಿ ವಾಚಿಸಿದರು. ಗೌರವ ಶಿಕ್ಷಕಿಯರಾದ ಭೂದೇವಿ ಮತ್ತು ಮಮತಾ ಅತಿಥಿಗಳನ್ನು ಪರಿಚಯಿಸಿದರು. ಶಿಕ್ಷಕಿಯರಾದ ರೇಖಾ, ರೇಣುಕಾ ನಾಯಕ್, ಅಕ್ಷತಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಶಿಕ್ಷಕರಾದ ದೇವು ಸಂದೇಶ ವಾಚಿಸಿದರು. ಶಿಕ್ಷಕಿ ಮಾಲಾಶ್ರೀ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು. ಮಹಾಬಲ ಆಚಾರ್ಯ ವಂದಿಸಿದರು.