ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರ್ಯರು ಕರ್ನಾಟಕದಲ್ಲಿ ಶಿಲ್ಪಕಲೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಬೇಲೂರು ಹಾಗೂ ಹಳೇಬೀಡು ದೇವಸ್ಥಾನಕ್ಕೆ ಅವರ ಶಿಲ್ಪಕಲೆಯ ಕೊಡುಗೆಯು ಅಪಾರವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಭಾಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಶೋಕಾಚರಣೆ ಹಿನ್ನೆಲೆ, ಸಾಂಕೇತಿಕವಾಗಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು.
ಜಕಣಾಚಾರಿ ಅವರ ಮಗ ಡಂಕಣಾಚಾರಿ ಕೂಡ ಶಿಲ್ಪಕಲೆಗೆ ಹೆಚ್ಚಿನ ಒತ್ತು ನೀಡಿದ್ದರು. ರಾಜ್ಯದ ಶಿಲ್ಪಕಲೆ ಕ್ಷೇತ್ರದಲ್ಲಿ ಜಕಣಾಚಾರಿ ಬಿಟ್ಟರೆ ಬೇರೆ ಯಾವ ಶಿಲ್ಪಿಯೂ ಅವರನ್ನು ಮೀರಿಸುವವರಿಲ್ಲ. ರಾಜ್ಯ ಸರ್ಕಾರವು ಶಿಲ್ಪಕಲೆಗೆ ಅತಿ ಹೆಚ್ಚು ಕೊಡುಗೆ ನೀಡುವ ಶಿಲ್ಪಿಗಳಿಗೆ “ಜಕಣಾಚಾರಿ ಪ್ರಶಸ್ತಿ” ನೀಡಿ ಗೌರವಿಸಲಾಗುತ್ತದೆ ಎಂದರು.
ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಮಾತನಾಡಿ, ಕನ್ನಡ ಶಿಲ್ಪಕಲೆಗೆ ಜಕಣಾಚಾರಿ ಅವರು ನೀಡಿದ ಕೊಡುಗೆ ಬಹುಮುಖ್ಯವಾಗಿದೆ. ಕೈದಾಳ ದೇವಾಲಯದ ಶಿಲ್ಪಕಲೆ ಅದ್ಭುತವಾಗಿದ್ದು, ಅವರು ಕೊಟ್ಟಿರುವ ಕೊಡುಗೆಯನ್ನು ಉಳಿಸಿ, ಬೆಳೆಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಿ.ಎ.ಆಚಾರ್ಯ ಹಾಗೂ ಕ.ಸಾ.ಪ.ದ ಅಧ್ಯಕ್ಷ ನೀಲಾವರ ಸುರೇದ್ರ ಅಡಿಗ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಮುಲ್ಕಿ, ಕ.ಸಾ.ಪ ದ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕ.ಸಾ.ಪ ಮಾಧ್ಯಮ ಕಾರ್ಯದರ್ಶಿ ನರಸಿಂಹಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇರ್ಶಕಿ ಪೂರ್ಣಿಮಾ ಸ್ವಾಗತಿಸಿ, ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ವೆಂಕಟೇಶ ಆಚಾರ್ಯ ವಂದಿಸಿದರು.