Site icon Kundapra.com ಕುಂದಾಪ್ರ ಡಾಟ್ ಕಾಂ

ಮೌಲ್ಯ ಆಧಾರಿತ ಶಿಕ್ಷಣ ವರ್ತಮಾನದ ತುರ್ತು: ಉದಯ್ ಕುಮಾರ್ ಶೆಟ್ಟಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ವಿದ್ಯಾರ್ಥಿ ದೆಸೆಯಲ್ಲಿಯೇ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಸನ್ನಡತೆಯನ್ನು ಬೆಳೆಸಿಕೊಂಡಾಗ ಭವಿಷ್ಯದ ಜೀವನದಲ್ಲಿ ಯಶಸ್ಸು ಸಾಧ್ಯ. ಮೌಲ್ಯ ಆಧಾರಿತ ಶಿಕ್ಷಣ ವರ್ತಮಾನದ ತುರ್ತು ಎಂದು ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಕಾಳಾವರ ಉದಯ್ ಕುಮಾರ್ ಶೆಟ್ಟಿ ಹೇಳಿದರು.

ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ನಡತೆ ಮತ್ತು ಶಿಸ್ತು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಐಕ್ಯೂಎಸಿ ಸಂಯೋಜಕಿ ಹಾಗೂ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ., ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಕಾರ್ಯಕ್ರಮದ ಸಂಯೋಜಕ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುಧೀರ್ ಕುಮಾರ್, ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಕಿ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ವೇತ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.

Exit mobile version