Site icon Kundapra.com ಕುಂದಾಪ್ರ ಡಾಟ್ ಕಾಂ

ಹಾಸ್ಟೆಲ್ ವಂಚಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಿ: ಶಾಸಕ ಗಂಟಿಹೊಳೆ ಸೂಚನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಹಿಂದುಳಿದ ವರ್ಗಗಳ, ಪರಿಶಿಷ್ಟ ಜಾತಿ, ಪಂಗಡ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ, ಹಾಸ್ಟೆಲ್ ಸಮಸ್ಯೆಗಳ ಕುರಿತು ಇಲ್ಲಿನ “ಪ್ರಜಾ ಸೌಧ” ದಲ್ಲಿರುವ ಶಾಸಕರ ಕಚೇರಿಯಲ್ಲಿ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.

ಈ ವೇಳೆ ಅವರು ಮಾತನಾಡಿ, ಪ್ರಸ್ತುತ ಬೈಂದೂರು ವಿಧಾನ ಸಭಾ ವ್ಯಾಪ್ತಿಯಲ್ಲಿ ಬರುವ ಹಾಸ್ಟೆಲ್ ಗಳು ಹಾಗೂ ವಸತಿ ನಿಲಯಗಳಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. ಆದರೆ ಕುಂದಾಪುರ ಹಾಗೂ ಉಡುಪಿ ಭಾಗಗಳಲ್ಲಿನ ಹಾಸ್ಟೆಲ್ ಗಳಲ್ಲಿ ಅರ್ಜಿ ಹಾಕಿರುವ ಎಲ್ಲಾ ಗ್ರಾಮೀಣ ಭಾಗದ ಬಡ ಕುಟುಂಬಗಳ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವುದು ಹಾಗೂ ವಿದ್ಯಾರ್ಥಿಗಳು ಹಾಸ್ಟೆಲ್ ವಂಚಿತರಾಗುತ್ತಿರುವ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ನಿರಂತರ ತರುವ ವ್ಯವಸ್ಥೆಗಳಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೊಸ ಹಾಸ್ಟೆಲ್ ಗಳ ಪ್ರಸ್ತಾವನೆ, ಉನ್ನತಿಕರಣ ಹಾಗೂ ಹಾಸ್ಟೆಲ್ ನಿರ್ವಹಣೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಈ ಬಗ್ಗೆ ಸೂಕ್ತ ಪ್ರಸ್ತಾವನೆಗಳನ್ನು ಮೇಲಾಧಿಕಾರಿಗಳಿಗೆ ಸಲ್ಲಿಸುವುದು ಹಾಗೂ ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ಹಾಸ್ಟೆಲ್ ಬೇಡಿಕೆ ಹಾಗೂ ವಿವಿಧ ಸಮಸ್ಯೆಗಳ ಬಗ್ಗೆ ಬೆಂಗಳೂರಿನಲ್ಲಿ ಸಭೆ  ಕರೆದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದರು.

ಹಾಸ್ಟೆಲ್ ವಾರ್ಡನ್ ಗಳು ಹಾಗೂ ವಸತಿ ಶಾಲೆಗಳ ಪ್ರಾಂಶುಪಾಲರು ಪ್ರತಿಯೊಬ್ಬ ವಿದ್ಯಾರ್ಥಿಗಳ ಬಗ್ಗೆ ಗಮನಹರಿಸಿ ಗುಣಮಟ್ಟದ ಸೌಲಭ್ಯ ಒದಗಿಸುವುದರ ಜೊತೆಗೆ ಉತ್ತಮ ಕಲಿಕಾ ವಾತಾವರಣ ನಿರ್ಮಿಸುವುದರ ಕಡೆಗೆ ಆಸ್ಥೆ ವಹಿಸಬೇಕು ಎಂದರು.

ಸಭೆಯಲ್ಲಿ  ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ಸಮಾಜ ಕಲ್ಯಾಣ ಅಧಿಕಾರಿ, ವಿವಿಧ ವಸತಿ ಶಾಲೆಗಳ ಪ್ರಾಂಶುಪಾಲರು, ಹಾಸ್ಟೆಲ್ ವಾರ್ಡನ್ ಗಳು ಉಪಸ್ಥಿತರಿದ್ದರು.

Exit mobile version