ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ 2025-26ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ ಕಾರ್ಯಕ್ರಮವು ಬುಧವಾರದಂದು ಕಾಲೇಜಿನ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯಅತಿಥಿಗಳಾಗಿ ಆಗಮಿಸಿದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸುಕೇಶ್ ಶೆಟ್ಟಿ ಕ್ರೀಡಾ ದ್ವಜಾರೋಹಣಗೈದು ಶುಭ ಹಾರೈಸಿ ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಬೆಳವಣಿಗೆ ಉತ್ತೇಜಿಸುವುದಲ್ಲದೇ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಜಿಲ್ಲಾ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಕ್ರೀಡಾಕೂಟದಲ್ಲಿ ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ ಸೋತವರು ಮುಂದೆ ಕಠಿಣ ಪರಿಶ್ರಮದೊಂದಿಗೆ ವಿಜಯಿಯಾಗಲು ಪ್ರಯತ್ನ ಪಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಅನುಪಮ ಎಸ್. ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಶಾರದಾ ವಿದ್ಯಾಸಂಸ್ಥೆಯು ಪ್ರಾರಂಭವಾದ ದಿನದಿಂದ ಕ್ರೀಡೆಗೆ ಉತ್ತೇಜನ ನೀಡುತ್ತಾ ಬಂದಿರುವುದರಿಂದ ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತಿದ್ದು ಕಠಿಣ ಪರಿಶ್ರಮವೇ ಕ್ರೀಡಾಸ್ಪೂರ್ತಿಗೆ ದಾರಿ ಮಾಡಿಕೊಡುತ್ತದೆ ಎಂದರು.
ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ಜರುಗಿತು. ವಿಶ್ವವಿದ್ಯಾನಿಲಯ ಮತ್ತು ಕಾಲೇಜಿನ ವಿವಿಧ ಕ್ರೀಡೆಗಳಲ್ಲಿ ಪ್ರತಿನಿಧಿಸಿ ವಿಜೇತರಾದ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿ ಬೆಳಗಿಸಿದರು.
ಅಂತಿಮ ಪದವಿ ವಿದ್ಯಾರ್ಥಿನಿ ಜ್ಯೋತಿ ಪ್ರತಿಜ್ಙಾ ವಿಧಿ ಬೋಧಿಸಿದರು. ವಾರ್ಷಿಕ ಕ್ರೀಡಾಕೂಟದ ಪುರುಷರ ವಿಭಾಗದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಆದಿತ್ಯ ಮತ್ತು ಮಹಿಳೆಯರ ವಿಭಾಗದಲ್ಲಿ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿನಿ ಸಾಕ್ಷಿ ಕ್ರೀಡಾಗ್ರೇಸರರಾದರು.
ಕಾಲೇಜಿನ ಆಡಳಿತಾಧಿಕಾರಿ ಡಾ. ಮೋಹನ ಕೆ.ಎನ್. ಅತಿಥಿಗಳನ್ನು ಪರಿಚಯಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕ ಅಕ್ಷಯ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಸೂರಜ್ ಕುಮಾರ್ ಶೆಟ್ಟಿ ವಂದಿಸಿದರು.

